HomeKarnatakaಮತ್ತೆ ಹೆಚ್ಚುವರಿ 23 ತಾಲ್ಲೂಕು ಬರಪೀಡಿತ ಎಂದು ಘೋಷಿಸಿ ಸರ್ಕಾರ ಆದೇಶ: ಒಟ್ಟು ಸಂಖ್ಯೆ 124ಕ್ಕೆ...

ಮತ್ತೆ ಹೆಚ್ಚುವರಿ 23 ತಾಲ್ಲೂಕು ಬರಪೀಡಿತ ಎಂದು ಘೋಷಿಸಿ ಸರ್ಕಾರ ಆದೇಶ: ಒಟ್ಟು ಸಂಖ್ಯೆ 124ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ನಮ್ಮ ಸರ್ಕಾರ ನಿರಂತರ ವೈಜ್ಞಾನಿಕವಾಗಿ ಮೌಲ್ಯಮಾಪನ ನಡೆಸುತ್ತಿದ್ದು, ರೈತರ ಸಂಕಷ್ಟಕ್ಕೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮೊದಲ ಹಂತದಲ್ಲಿ 102 ತಾಲೂಕುಗಳಲ್ಲಿ ಪ್ರತ್ಯಕ್ಷ ಪರಿಶೀಲನೆ ನಡೆಸಿ, 89 ತೀವ್ರ ಬರ ಹಾಗೂ 12 ಸಾಧಾರಣ ಬರ ಸೇರಿದಂತೆ ಒಟ್ಟು 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೇವೆ. ಇದೀಗ ಎರಡನೇ ಹಂತದಲ್ಲಿ ಮತ್ತೆ ಹೆಚ್ಚುವರಿಯಾಗಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಆದೇಶ ಹೊರಡಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಈ ಪೈಕಿ 21 ತಾಲೂಕುಗಳು ತೀವ್ರ ಬರಪೀಡಿತ ಹಾಗೂ 2 ತಾಲೂಕುಗಳು ಸಾಧಾರಣ ಬರಪೀಡಿತವಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ಎಂದು ಘೋಷಿಸಲಾದ ತಾಲೂಕುಗಳ ಸಂಖ್ಯೆ 124ಕ್ಕೆ ಏರಿಕೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೀವ್ರ ಬರಪೀಡಿತ ತಾಲೂಕುಗಳು: ತಿಪಟೂರು, ಕಾರಟಗಿ, ಮಾನ್ವಿ, ಸಿಂಧನೂರು, ಸಿರವಾರ, ಅಫಜಲಪುರ, ಆಳಂದ, ಚಿತ್ತಾಪುರ, ಕಲಬುರಗಿ, ಯಡ್ರಾಮಿ, ಶಹಾಬಾದ್, ಭಾಲ್ಕಿ, ಬಸವನಬಾಗೇವಾಡಿ, ಬಬಲೇಶ್ವರ, ತಿಕೋಟಾ, ರಟ್ಟೀಹಳ್ಳಿ, ಹುಬ್ಬಳ್ಳಿ, ನವಲಗುಂದ, ಹುಬ್ಬಳ್ಳಿ ನಗರ, ಅಣ್ಣಿಗೇರಿ ಹಾಗೂ ಕಡೂರು.

ಸಾಧಾರಣ ಬರಪೀಡಿತ ತಾಲೂಕುಗಳು: ಪೊನ್ನಂಪೇಟೆ ಮತ್ತು ವೀರಾಜಪೇಟೆ

ಇದರ ಜೊತೆಗೆ, ಜೂನ್ 1ರಿಂದ ಸೆಪ್ಟೆಂಬರ್ 16ರವರೆಗಿನ ಮಳೆ ಪ್ರಮಾಣ, ಮಣ್ಣಿನ ತೇವಾಂಶ, ಬೆಳೆ ಸ್ಥಿತಿ ಸೇರಿದಂತೆ ವಿವಿಧ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಇದೀಗ 17 ಜಿಲ್ಲೆಗಳ 53 ತಾಲೂಕುಗಳನ್ನು ಮೂರನೇ ಹಂತದ ಗ್ರೌಂಡ್‌ ಟ್ರೂಥಿಂಗ್‌ಗೆ ಆಯ್ಕೆ ಮಾಡಲಾಗಿದೆ.

ಈ ಪರಿಶೀಲನೆಯನ್ನು ಹೆಚ್ಚು ನಿಖರ ಹಾಗೂ ಪಾರದರ್ಶಕವಾಗಿ ನಡೆಸಲು ‘Crop Loss GT’ ಮೊಬೈಲ್ ಆ್ಯಪ್ ಬಳಸಲಾಗುತ್ತಿದೆ. ಇದರ ಮೂಲಕ ಜಿಯೋ-ಟ್ಯಾಗ್ ಮಾಡಲಾದ ಛಾಯಾಚಿತ್ರಗಳು, ಜಿಪಿಎಸ್ ಮಾಹಿತಿ, ಜಮೀನಿನ ವಿವರ ಹಾಗೂ ಬೆಳೆ ಹಾನಿಯ ಪ್ರಮಾಣವನ್ನು ಸ್ಥಳದಲ್ಲಿಯೇ ದಾಖಲಿಸಲಾಗುತ್ತದೆ.

ಸೆಪ್ಟೆಂಬರ್ 19 ಮತ್ತು 20ರಂದು ಅಧಿಕಾರಿಗಳ ತಂಡಗಳು ಆಯ್ಕೆಯಾದ ಗ್ರಾಮಗಳ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿಯನ್ನು ನೇರವಾಗಿ ಪರಿಶೀಲಿಸಲಿದ್ದು, ಸೆಪ್ಟೆಂಬರ್ 21ರೊಳಗೆ ಅಂತಿಮ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ರೈತರು ಎದುರಿಸುತ್ತಿರುವ ಸಂಕಷ್ಟದ ವಾಸ್ತವ ಸ್ಥಿತಿ ಸರ್ಕಾರದ ಗಮನಕ್ಕೆ ಬರಬೇಕು. ಯಾವ ರೈತನೂ ನೈಜ ಬೆಳೆ ಹಾನಿಯ ದಾಖಲೀಕರಣದಿಂದ ಹೊರಗುಳಿಯಬಾರದು ಎಂಬುದು ನಮ್ಮ ಆಶಯ. ವೈಜ್ಞಾನಿಕ ಪರಿಶೀಲನೆ, ಪಾರದರ್ಶಕ ಸಮೀಕ್ಷೆ ಮತ್ತು ನಿಖರ ವರದಿಯ ಆಧಾರದಲ್ಲಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು.

ಮುಂಗಾರು ಹಂಗಾಮು ಮುಗಿಯುವವರೆಗೂ ಬರ ಪರಿಸ್ಥಿತಿಯ ಮೇಲ್ವಿಚಾರಣೆ ಮುಂದುವರಿಯಲಿದ್ದು, ಅಗತ್ಯ ಕಂಡುಬಂದಲ್ಲಿ ಮುಂದಿನ ಹಂತದಲ್ಲಿಯೂ ಹೆಚ್ಚುವರಿ ತಾಲೂಕುಗಳನ್ನು ಗ್ರೌಂಡ್ ಟ್ರೂಥಿಂಗ್‌ಗೆ ಸೇರಿಸಲಾಗುವುದು.

ರೈತರ ಸಂಕಷ್ಟಕ್ಕೆ ಸ್ಪಂದಿಸುವುದು ಸರ್ಕಾರದ ಮೊದಲ ಆದ್ಯತೆ. ಬೆಳೆ ಹಾನಿಯ ನೈಜ ಚಿತ್ರಣ ಆಧರಿಸಿ, ನಿಯಮಾನುಸಾರ ಅಗತ್ಯ ನೆರವು ತಲುಪಿಸಲು ನಾವು ಬದ್ಧರಿದ್ದೇವೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular