ಬೆಂಗಳೂರು: ನಾಳೆ ಸಿಎಂ ಅವರನ್ನು ಉಪಹಾರಕೂಟಕ್ಕೆ ಆಹ್ವಾನಿಸಿದ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಇದು ನನಗೆ ಹಾಗೂ ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರ. ನಾವಿಬ್ಬರು ಸಹೋದರರಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಬ್ರೇಕ್ ಫಾಸ್ಟ್ ಮೀಟಿಂಗ್ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, ನೀವುಗಳು ಸದಾ ಗುಂಪು, ಗುಂಪು ಎಂದು ಬಿಂಬಿಸುತ್ತಿದ್ದೀರಿ. ನಮ್ಮಲ್ಲಿ ಯಾವುದೇ ಗುಂಪಿಲ್ಲ. ನಮ್ಮ ಜೊತೆ 140 ಶಾಸಕರಿದ್ದಾರೆ. ನಾವು ಹುಟ್ಟುವಾಗಲೂ ಒಬ್ಬರೇ, ಸಾಯುವಾಗಲೂ ಒಬ್ಬರೆ. ಪಕ್ಷದ ವಿಚಾರ ಬಂದಾಗ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ. ಈ ಬಗ್ಗೆ ಚಿಂತೆ ಬೇಡ ಎಂದರು.
ನಾನು ಸರ್ವಪಕ್ಷ ಸಭೆ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತಿದ್ದೇನೆ. ಸಂಸತ್ ಅಧಿವೇಶನ ಆರಂಭವಾಗಿದ್ದು, ರಾಜ್ಯದ ಹಿತರಕ್ಷಣೆ ವಿಚಾರವಾಗಿ ಸಂಸದರಿಗೆ ಕೆಲವು ಜವಾಬ್ದಾರಿಗಳ ಬಗ್ಗೆ ಹೇಳಬೇಕಿದೆ ಎಂದು ತಿಳಿಸಿದರು.
