ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿರುವಾಗಲೇ ಪರಿಷತ್ ಸದಸ್ಯ ಚನ್ನರಾಜಹಟ್ಟಿಹೊಳಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಪೋಸ್ಟ್ ವೊಂದು ಮತ್ತೊಂದು ಚರ್ಚೆಗೆ ಗ್ರಾಸವಾಗಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಆಗಮಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ ಕೋರಿ ಸಾಮಾಜಿಕ ಜಾಲತಾಣಗಳಲ್ಲಿ ಎಂಎಲ್ ಸಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ ಹಟ್ಟಿಹೊಳಿ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ ಎಂದು ಬರೆಯುವ ಬದಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ.
ಹಟ್ಟಿಹೋಳಿಯವರ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಮತ್ತೆ ಎಡಿಟ್ ಮಾಡಿ ಪ್ರಕಟಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಚನ್ನರಾಜ ಹಟ್ಟಿಹೊಳಿ, ಸ್ವತಃ ನಾವೇ ಸೋಷಿಯಲ್ ಮೀಡಿಯಾಗಳಲ್ಲಿ ಬರೆಯುವುದಿಲ್ಲ. ಹ್ಯಾಂಡ್ಲರ್ ಇರುತ್ತಾರೆ. ಹ್ಯಾಂಡ್ಲರ್ ಮಿಸ್ಟೇಕ್ ನಿಂದ ಹಾಗಾಗಿದೆ. ಆತ ನಿದ್ದೆಗಣ್ಣಿನಲ್ಲಿ ಬರೆದಿದ್ದಾನೆ. ಬಳಿಕ ನಾವು ಸರಿಪಡಿಸಿದ್ದೇವೆ ಎಂದು ಸಮಜಾಯಿಷಿ ನೀಡಿದ್ದಾರೆ.

