ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಸ್ತಾಂತರ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಬಜೆಟ್ ಪೂರ್ವಭಾವಿ ಸಭೆಗೆ ಗೈರಾಗಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ದಿಢೀರ್ ದೆಹಲಿ ಪ್ರವಾಸ ಕೈಗೊಂಡಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.
ಕೆಲ ದಿನಗಳಿಂದ ಕೊಂಚ ತಣ್ಣಗಾಗಿದ್ದ ಕುರ್ಚಿ ಕಿತ್ತಾಟ ಇದೀಗ ಮತ್ತೆ ಚರ್ಚೆಗೆ ಕಾರಣವಾಗಿದೆ. ಬಜೆಟ್ ಪೂರ್ವಭಾವಿ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ ಇಂದೇ ಡಿಕೆ ಶಿವಕುಮಾರ್ ಜವಾಬ್ದಾರಿ ವಹಿಸಿರುವ ಇಲಾಖೆಗಳ ಸಭೆಯನ್ನೂ ಕರೆದಿದ್ದಾರೆ. ಸಭೆಗೆ ಗೈರಾಗಿ ಡಿಸಿಎಂ ದೆಹಲಿಯತ್ತ ಪ್ರಯಾಣಿಸುತ್ತಿರುವುದು ರಾಜ್ಯ ರಾಜಕೀಯ ವಯದಲ್ಲಿ ಹೊಸ ಚರ್ಚೆಗಳಿಗೆ ಕಾರಣವಾಗಿದೆ.
ಅಸ್ಸಾಂ ಚುನಾವಣೆ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಕರೆದ ಸಭೆಯಲ್ಲಿ ಭಾಗಿಯಾಗಲು ದೆಹಲಿಗೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಬಜೆಟ್ ಪೂರ್ವಭಾವಿ ಸಭೆಯನ್ನು ಬಿಟ್ಟು ದೆಹಲಿಗೆ ತೆರಳುತ್ತಿರುವುದು ಅಚ್ಚರಿಯಾಗಿದೆ.
ಬಜೆಟ್ ಪೂರ್ವಭಾವಿ ಸಭೆಗೆ ಗೈರಾಗಿ ದೆಹಲಿಗೆ ತೆರಳುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನಾನು ಕೇವಲ ಡಿಸಿಎಂ ಮಾತ್ರವಲ್ಲ. ಪಕ್ಷದ ಅಧ್ಯಕ್ಷ ಕೂಡ ಹೌದು. ಹೀಗಾಗಿ, ದೆಹಲಿ ನಾಯಕರನ್ನು ಭೇಟಿಯಾಗಿ ಚರ್ಚಿಸುತ್ತೇನೆ ಎಂದಿದ್ದಾರೆ.
ನಾನು ದೆಹಲಿಗೆ ಹೋಗುತ್ತಿದ್ದೇನೆ. ಅಲ್ಲಿ ನಾಯಕರನ್ನು ಭೇಟಿಯಾಗಿ ಎಲ್ಲವನ್ನೂ ಚರ್ಚಿಸುತ್ತೇನೆ. ನನ್ನ ಕಷ್ಟ, ದುಃಖ, ದುಮ್ಮಾನ, ನಿಮ್ಮ ಸಂತೋಷ, ಬಯಕೆ ಎಲ್ಲಾ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಡಿ.ಕೆ ಶಿವಕುಮಾರ್ ಆಡಿದ ಈ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ. ವರಿಷ್ಠರ ಮುಂದೆ ಅಧಿಕಾರ ಹಸ್ತಾಂತರದ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೊಳ್ಳುತ್ತಾರಾ? ಎಂಬ ಪ್ರಶ್ನೆ ಮೂಡಿದೆ.
ಬಜೆಟ್ ಪೂರ್ವಭಾವಿ ಸಭೆಗೆ ಗೈರಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ, ಮುಖ್ಯಮಂತ್ರಿಗಳ ಅನುಮತಿ ಪಡೆದುಕೊಂಡೇ ದೆಹಲಿಗೆ ತೆರಳುತ್ತಿದ್ದೇನೆ. ನೀರಾವರಿ ಇಲಾಖೆಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರು. ನೀರಾವರಿ ಯೋಜನೆಗಳ ಬಗ್ಗೆ ನನಗಿಂತ ಸಿಎಂ ಅವರಿಗೆ ಹೆಚ್ಚು ಗೊತ್ತಿದೆ ಎಂದು ಹೇಳಿದ್ದಾರೆ.
ಒಟ್ಟಾರೆ ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ ಸಾಕಷ್ಟು ಕುತೂಹಲ ಮೂಡಿಸಿದೆ.

