ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಇಂದು (ಜೂನ್ 3, 2026) ನಡೆದ ಭವ್ಯ ಸಮಾರಂಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕರ್ನಾಟಕದ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ವಿಧಾನಸೌಧಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು ಮಹಾತ್ಮ ಗಾಂಧೀಜಿಯವರ ಫೋಟೋಗೆ ಪುಷ್ಪನಮನ ಸಲ್ಲಿಸಿದರು.ರಾಜ್ಯದ 25 ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಕೆ. ಶಿವಕುಮಾರ್ ಅವರೊಂದಿಗೆ, ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ನೂತನ ಸಿಎಂ ಮತ್ತು ಡಿಸಿಎಂ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನವನ್ನು ಬೋಧಿಸಿದರು.
ಡಿ.ಕೆ. ಶಿವಕುಮಾರ್ ಅವರು ಭಾರತದ ಸಂವಿಧಾನದ ಪ್ರತಿಯನ್ನು ಹಿಡಿದು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಗಮನ ಸೆಳೆದರು.ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯಲ್ಲದೆ, 12 ಮಂದಿ ಹಿರಿಯ ಕಾಂಗ್ರೆಸ್ ನಾಯಕರು ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಇದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮತ್ತು ಮಾಜಿ ಸ್ಪೀಕರ್ ಯು.ಟಿ. ಖಾದರ್ ಕೂಡ ಸೇರಿದ್ದಾರೆ.ಈ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ಹಿರಿಯ ನಾಯಕರು ಹಾಗೂ ಧಾರ್ಮಿಕ ಮುಖಂಡರು ಭಾಗವಹಿಸಿದ್ದರು.
ಪ್ರಧಾನಿ ಮೋದಿ ಅಭಿನಂದನೆ: ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದು, ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

