ಕೊಪ್ಪಳ: ಸಿಎಂ ಬದಲಾವಣೆ ವಿಚಾರವಾಗಿ ಬಹಿರಂಗ ಹೇಳಿಕೆ ನೀಡಿದವರ ವಿರುದ್ಧ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ನೋಟಿಸ್ ನೀಡಿ ಎಚ್ಚರಿಕೆ ಸಂದೇಶ ರವಾನಿಸುತ್ತಿದೆ. ಅಲ್ಲದೇ ಈ ಹಿಂದೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿಕೆ ನೀಡುವ ಮೂಲಕ ಸ್ವತಃ ಡಿ.ಕೆ.ಶಿವಕುಮಾರ್ ಕೆಂಗಣ್ಣಿಗೆ ಗುರಿಯಾಗಿದ್ದ ಶಾಸಕ ಇಕ್ಬಾಲ್ ಹುಸೇನ್ ಮತ್ತೆ ಹೇಳಿಕೆ ನೀಡಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ. ಇದು ನನ್ನ ಅಭಿಲಾಷೆ. ನನ್ನ ಅಭಿಪ್ರಾಯವನ್ನು ನಾನು ವ್ಯಕ್ತಪಡಿಸುತ್ತಿದ್ದೇನೆ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ. ನನ್ನ ಸ್ಪಷ್ಟ ಅಭಿಪ್ರಾಯವನ್ನು ನಾನು ಹೈಕಮಾಂಡ್ ಅವರಿಗೂ ತಿಳಿಸಿದ್ದೇನೆ. ನನ್ನ ಹೇಳಿಕೆಗೆ ನಾನು ಬದ್ಧ. ಕಾಂಗ್ರೆಸ್ ಶಿಸ್ತಿನ ಪಕ್ಷ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ನಾನು ನನ್ನ ಅನಿಸಿಕೆ, ಆಸೆ, ಅಭಿಪ್ರಾಯವನ್ನು ಹೇಳಿದ್ದೇನೆ. ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ನಾನು ಈ ಹಿಂದೆಯೂ ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ. ಈ ಬಗ್ಗೆ ಪದೇ ಪದೇ ಕೇಳುವ ಅವಶ್ಯಕತೆ ಇಲ್ಲ ಎಂದರು.