ಬೆಂಗಳೂರು: ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ನಮಗೆ ನ್ಯಾಯ ಸಿಕ್ಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮೇಕೆದಾಟು ಯೋಜನೆ ಕಾನೂನು ಹೋರಾಟದಲ್ಲಿ ನ್ಯಾಯಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ. ಮೇಕೆದಾಟು ನಮ್ಮ ನೀರು, ನಮ್ಮ ಹಕ್ಕು ಯೋಜನೆ ಎಂದರು.
ಮೇಕೆದಾಟು ಯೋಜನೆಯಿಂದ ನಾವು ತಮಿಳುನಾಡಿಗೆ ಯಾವುದೇ ಅಡ್ಡಿ ಮಾಡುತ್ತಿಲ್ಲ. ಈ ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಲಾಭವಾಗಲಿದೆ. ರಾಜ್ಯದ ಜನರ ಪ್ರಾರ್ಥನೆ, ಜನರ ಕಷ್ಟಕ್ಕೆ ನ್ಯಾಯಾಲಯ ಸ್ಪಂದಿಸಿದೆ ಎಂದರು. ನ್ಯಾಯಾಲಯಗಳ ತೀರ್ಮಾನದಂತೆ ತಮಿಳುನಾಡು ತನ್ನ ಪಾಲಿನ ನೀರು ಪಡೆಯಲಿದೆ. ಹೀಗಾಗಿ ನಾವು ಈ ಯೋಜನೆಯನ್ನು ಮುಂದುವರೆಸಿಕೊಂಡು ಹೋಗುತ್ತೇವೆ ಎಂದರು.
