HomeLatest NewsBIG NEWS: ಡಿ.ಕೆ.ಶಿವಕುಮಾರ್ ಬೆಂಬಲಿಗ ಶಾಸಕರಿಂದ ಡಿನ್ನರ್ ಮೀಟಿಂಗ್: ಹೈಕಮಾಂಡ್ ಮೇಲೆ ಒತ್ತಡ ಹೇರಲು ತಂತ್ರ;...

BIG NEWS: ಡಿ.ಕೆ.ಶಿವಕುಮಾರ್ ಬೆಂಬಲಿಗ ಶಾಸಕರಿಂದ ಡಿನ್ನರ್ ಮೀಟಿಂಗ್: ಹೈಕಮಾಂಡ್ ಮೇಲೆ ಒತ್ತಡ ಹೇರಲು ತಂತ್ರ; ದೆಹಲಿ ಯಾತ್ರೆ ಬಗ್ಗೆ ಚರ್ಚೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ, ಅಧಿಕಾರ ಹಸ್ತಾಂತರ ಕುರಿತ ಚರ್ಚೆ ಜೋರಾಗಿ ನಡೆಯುತ್ತಿರುವ ನಡುವೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಗ ಶಾಸಕರು ಡಿನ್ನರ್ ಮೀಟಿಂಗ್ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಗುರುವಾರ ರಾತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಗ ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉನ್ನತ ಮಟ್ಟದ ಔತಣಕೂಟ ಸಭೆ ನಡೆಸಿದ್ದಾರೆ. ಮಾಗಡಿ ಶಾಸಕ ಎಚ್​ಸಿ ಬಾಲಕೃಷ್ಣ ಹುಟ್ಟುಹಬ್ಬದ ನೆಪದಲ್ಲಿ ಸಭೆ ನಡೆದಿದೆ ಎನ್ನಲಾಗಿದ್ದರೂ ನಾಯಕತ್ವದ ಬದಲಾವಣೆ ಕುರಿತ ಗಂಭೀರ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ. ಇದು ರಾಜ್ಯ ರಾಜಕೀಯದಲ್ಲಿ ಮತ್ತೆ ಭಾರಿ ಚರ್ಚೆಗೆ ಕಾರಣವಾಗಿದೆ.

ಡಿ.ಕೆ ಶಿವಕುಮಾರ್ ಬೆಂಬಲಿಗರು ಒಟ್ಟು ಸುಮಾರು 60ಕ್ಕೂ ಹೆಚ್ಚು ಶಾಸಕರನ್ನು ಸಂಪರ್ಕಿಸಿದ್ದರು. ಇವರಲ್ಲಿ ಬರೋಬ್ಬರಿ 40 ಮಂದಿ ಶಾಸಕರು ಔತಣಕೂಟದಲ್ಲಿ ಭಾಗವಹಿಸಿದ್ದಾರೆ. ಸುಮಾರು 20 ಶಾಸಕರು ಮದುವೆ, ವಿದೇಶ ಪ್ರವಾಸ ಸೇರಿದಂತೆ ವಿವಿಧ ಕಾರಣಗಳಿಂದ ಗೈರಾಗಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿನ್ನರ್ ಮೀಟಿಂಗ್ ನಲ್ಲಿ ಮುಖ್ಯಮಂತ್ರಿ ಸ್ಥಾನ ಕುರಿತಂತೆ ಗಂಭೀರ ಚರ್ಚೆ ನಡೆದಿದೆ. ಹೈಕಮಾಂಡ್ ನಾಯಕರು ನಿರ್ಧಾರಕ್ಕೆ ಮುಂದಾಗದಿದ್ದರೆ ಒತ್ತಡ ಹೇರುವ ಬಗ್ಗೆಯೂ ಸಭೆಯಲ್ಲಿ ಕೆಲ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಮುಂದಿನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಾಯಕತ್ವ ಗೊಂದಲಕ್ಕೆ ಅಂತಿಮ ತೆರೆ ಎಳೆಯಬೇಕು. ಈ ಗೊಂದಲದ ವಾತಾವರಣದಿಂದ ಪಕ್ಷದ ಮೇಲೆ ದುಷ್ಪರಿಣಾಮ ಬೀಳುತ್ತಿದ್ದು, ರಾಜ್ಯದ ಜನತೆಗೆ ತಪ್ಪು ಸಂದೇಶ ಹೋಗುತ್ತಿದೆ ಎಂಬ ಮಾತುಗಳು ಸಭೆಯಲ್ಲಿ ಕೇಳಿಬಂದಿವೆ.

ಇನ್ನು ಸಭೆಯಲ್ಲಿ ನಾಯಕತ್ವ ಬದಲಾವಣೆ ವಿಚಾಅರವಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರಗಾರಿಕೆಯನ್ನೂ ರೂಪಿಸಲಾಗಿದೆ. ದೆಹಲಿಯ ವರಿಷ್ಠರು ಸ್ಪಷ್ಟ ನಿರ್ಧಾರ ಕೈಗೊಳ್ಳಲೇಬೇಕು ಎಂದು ಶಾಸಕರು ಒತ್ತಾಯಿಸಿದ್ದಾರೆ. ಬಜೆಟ್ ಅಧಿವೇಶನದ ವೇಳೆಯೇ ಮತ್ತೆ ಸಭೆ ಸೇರಲು ಯೋಜನೆ ರೂಪಿಸಲಾಗಿದೆ.

ಡಿ.ಕೆ. ಶಿವಕುಮಾರ್ ಬೆಂಬಲಿಗರು ಶೀಘ್ರದಲ್ಲೇ ದೆಹಲಿಗೆ ತೆರಳುವ ಬಗ್ಗೆಯೂ ಚರ್ಚಿಸಿದ್ದಾರೆ ಎನ್ನಲಾಗಿದೆ. 70ಕ್ಕೂ ಹೆಚ್ಚು ಶಾಸಕರು ಒಟ್ಟಾಗಿ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನ ಕುರಿತ ನಿರ್ಧಾರಕ್ಕೆ ಒತ್ತಡ ಹೇರುವ ಬಗ್ಗೆ ಸಮಾಲೋಚನೆ ನಡೆದಿದೆ. ಮೊದಲು ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿ ನಂತರ ದೆಹಲಿ ಪ್ರವಾಸಕ್ಕೆ ಮುಹೂರ್ತ ನಿಗದಿಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಒಟ್ಟಾರೆ ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವ್ಎಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಗ ಶಾಸಕರ ಡಿನ್ನರ್ ಮೀಟಿಂಗ್ ತೀವ್ರ ಕುತೂಹಲ ಮೂಡಿಸಿದ್ದು, ಶಾಸಕರ ಮುಂದಿನ ನಡೆ ಏನಿರಲಿದೆ? ಎಂಬುದನ್ನು ಕಾದುನೋಡಬೇಕಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular