ಬೆಂಗಳೂರು: ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಯಾರಾದರೂ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ನಮ್ಮ ಸಚಿವರಾದ ಸತೀಶ್ ಜಾರಕಿಹೊಳಿ, ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಬಿಲ್ ಪಾವತಿ ಕಮಿಷನ್ ಕೇಳಲಾಗುತ್ತಿದೆ ಎಂಬ ಗುತ್ತಿಗೆದಾರರ ಆರೋಪದ ವಿಚಾರವಾಗಿ, ಬಿಲ್ ಪಾವತಿ ವಿಚಾರವಾಗಿ ಯಾರಾದರೂ ಕಮಿಷನ್ ಕೇಳಿದ್ದರೆ ಅವರು ಲೋಕಾಯುಕ್ತಕ್ಕೆ ದೂರು ನೀಡಲಿ. ಬಿಲ್ ಪಾವತಿ ವಿಚಾರವಾಗಿ ಗುತ್ತಿಗೆದಾರರು ಯಾಕೆ ಸಚಿವರನ್ನು ಕೇಳಬೇಕು. ಅವರಿಗೆ ಇಲಾಖೆಯ ಬಜೆಟ್ ಅರಿವಿಲ್ಲವೇ? ಅನುದಾನವೇ ಇಲ್ಲದಿರುವಾಗ ಅವರು ಗುತ್ತಿಗೆ ಹೇಗೆ ತೆಗೆದುಕೊಂಡರು? ಎಂದು ಪ್ರಶ್ನಿಸಿದರು.
ಬಿಜೆಪಿ ಅವಧಿಯಲ್ಲಿ ನನ್ನ ಇಲಾಖೆಯೊಂದರಲ್ಲೇ 1 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಗುತ್ತಿಗೆಯನ್ನು ನೀಡಲಾಗಿದೆ. ಈ ಗುತ್ತಿಗೆ ಬಿಲ್ ಪಾವತಿ ಮಾಡಿಸುವಂತೆ ಶಾಸಕರ ಮೂಲಕ ಮನವಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಒಂದು ವರ್ಷ ಮುಂಚಿತವಾಗಿಯೇ ನಾವು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದೆವು. ಅನುದಾನ ಇಲ್ಲದೆ ಯಾವುದೇ ಕಾಮಗಾರಿ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದ್ದೆವು. ಆದರೂ ನಮ್ಮ ಮಾತು ಕೇಳದೆ ಈಗ ರಾಜಕೀಯ ನಾಯಕರ ಮೂಲಕ ಬಿಲ್ ಪಾವತಿಗೆ ಮನವಿ ಪತ್ರ ನೀಡುತ್ತಿದ್ದಾರೆ ಎಂದರು.