ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಂಗೀಕರಿಸಿದ್ದಾರೆ.
ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ದಾವಣಗೆರೆ ದಕ್ಷಿಣ ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್ ಮುಸ್ಲಿಂ ನಾಯರ ನಡುವಿನ ಅಸಮಧಾನ ಸ್ಫೋಟಗೊಂಡಿದ್ದು, ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದ ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಜಬ್ಬಾರ್ ರಾಜೀನಾಮೆ ನೀಡಿದ್ದು, ಇದೀಗ ಈ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಂಗೀಕರಿಸಿದ್ದಾರೆ. ಅಲ್ಲದೇ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿ ಆದೇಶ ಹೊರಡಿಸಿದ್ದು, ಹೊಸ ಸಮಿತಿ ರಚಿಸುವುದಾಗಿ ತಿಳಿಸಿದ್ದಾರೆ.
ಅಬ್ದುಲ್ ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳು ಒಬ್ಬೊಬ್ಬರಾಗಿ ರಾಜೀನಾಮೆ ನೀಡಿದ್ದಾರೆ. ಮಹಮ್ಮದ್ ಸಿರಾಜ್ ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಘಟಕ ಉಪಾಧ್ಯಕ್ಷ ಹಾಗೂ ವಕ್ಫ ಮಂಡಳಿ ಮಾಜಿ ಅಧ್ಯಕ್ಷ. ಮೂರು ಜನ ಕೆಪಿಸಿಸಿ ಅಲ್ಪ ಸಂಖ್ಯಾತರ ಘಟಕ ಕಾರ್ಯದರ್ಶಿಗಳಾದ ಅಬ್ದುಲ್ ಗನಿ ತಾಹೀರ್, ನೂರ್ ಅಹ್ಮದ್, ಹುಸೇನ್ ಉಕ್ಕಡಗಾತ್ರಿ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಇಡೀ ಅಲ್ಪಸಂಖ್ಯಾತರ ಘಟಕವನ್ನೇ ವಿಸರ್ಜನೆ ಮಾಡಿದ್ದಾರೆ.

