ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಅಧಿಕಾರ ಹಂಚಿಕೆಯ ವಿಚಾರದಲ್ಲಿ ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಡಿ.ಕೆ.ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ವೀರ ಗಂಗಾಧರಜ್ಜನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಡಿ.ಕೆ.ಶಿವಕುಮಾರ್ ಅವರ ಜೊತೆಗೆ ಉಪಮುಖ್ಯಮಂತ್ರಿಯಾಗಿ ಡಾ. ಜಿ.ಪರಮೇಶ್ವರ್ ಅವರು ಪ್ರಮಾಣವಚನ ಸ್ವೀಕರಿಸಿದರು.ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ, ಯು.ಟಿ.ಖಾದರ್, ಡಾ.ಯತೀಂದ್ರ ಸಿದ್ದರಾಮಯ್ಯ, ಈಶ್ವರ್ ಖಂಡ್ರೆ, ಭೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ವಿವಿಧ ಮಠಾಧೀಶರು, ಜೈನ ಮುನಿಗಳು, ಮೌಲ್ವಿಗಳು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

