HomeKarnatakaBIG NEWS: ಪ್ರತಿ ಕ್ಷೇತ್ರದಲ್ಲಿ ನಿವೇಶನ; ಪ್ರತಿ ತಾಲ್ಲೂಕಿನಲ್ಲಿ ಕೈಗಾರಿಕಾ ಪಾರ್ಕ್ ನಿರ್ಮಾಣ: ಸಿಎಂ ಡಿ.ಕೆ.ಶಿವಕುಮಾರ್

BIG NEWS: ಪ್ರತಿ ಕ್ಷೇತ್ರದಲ್ಲಿ ನಿವೇಶನ; ಪ್ರತಿ ತಾಲ್ಲೂಕಿನಲ್ಲಿ ಕೈಗಾರಿಕಾ ಪಾರ್ಕ್ ನಿರ್ಮಾಣ: ಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ: ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಬದಲಾಗಿ ಸರ್ಕಾರವೇ ಜನರ ಮನೆಬಾಗಿಲಿಗೆ ತಲುಪಿ ಸೇವೆ ನೀಡಬೇಕು ಎಂಬುದು ತಮ್ಮ ಆಡಳಿತದ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲೇ ಕಾರ್ಯನಿರ್ವಹಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚಿಸಿದರು. ಅಧಿಕಾರಿಗಳ ಹಾಜರಾತಿ ಹಾಗೂ ಚಲನವಲನದ ಮೇಲೂ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜನರ ಅಹವಾಲುಗಳನ್ನು ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ಪ್ರತ್ಯೇಕ ಪ್ರಜಾಸೇವಾ ಇಲಾಖೆ ಸ್ಥಾಪಿಸಲಾಗಿದ್ದು, ಈ ಇಲಾಖೆಗೆ ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರು ಆಯ್ದ ತಾಲ್ಲೂಕುಗಳಲ್ಲಿ ಜನಸಂಪರ್ಕ ಸಭೆ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಪರಿಹರಿಸುವ ವ್ಯವಸ್ಥೆ ಜಾರಿಗೊಳ್ಳಲಿದೆ ಎಂದರು.

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಸಿ.ಎಸ್.ಆರ್. ನಿಧಿಯನ್ನು ಬಳಸಿಕೊಂಡು ಸುಮಾರು 2,000 ಆಧುನಿಕ ಸರ್ಕಾರಿ ಶಾಲೆಗಳನ್ನು ನಿರ್ಮಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದು ತಿಳಿಸಿದರು.

ಮೂರು ಗ್ರಾಮ ಪಂಚಾಯಿತಿಗಳಿಗೆ ಒಂದು ಶಾಲೆಯ ಮಾದರಿಯಲ್ಲಿ 10 ರಿಂದ 15 ಕೋಟಿ ರೂ. ವೆಚ್ಚದಲ್ಲಿ ಶಾಲೆಗಳನ್ನು ನಿರ್ಮಿಸಲಾಗುವುದು. ಜಿಲ್ಲೆಯ ಪ್ರಮುಖ ಶಿಕ್ಷಣ ಸಂಸ್ಥೆಗಳು ತಲಾ ಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಅರ್ಹ ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕು ದೊರೆಯಬೇಕು ಎಂಬುದು ಸರ್ಕಾರದ ಬದ್ಧತೆಯಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ತೆರಳಿ ಮತದಾರರ ಮಾಹಿತಿಯನ್ನು ಸಂಗ್ರಹಿಸಬೇಕು. ಜಾತಿ ಹಾಗೂ ವಾಸಸ್ಥಳ ಪ್ರಮಾಣಪತ್ರಗಳನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡುವ ವ್ಯವಸ್ಥೆಯೂ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಯುವಜನರಲ್ಲಿ ರಾಷ್ಟ್ರೀಯ ಐಕ್ಯತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದಾದ್ಯಂತ 10 ಸಾವಿರ ‘ಭಾರತ ಜೋಡೋ ಯುವಕ ಸಂಘ’ಗಳನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ 1,000 ಕೋಟಿ ರೂ. ಮೀಸಲಿಡಲಾಗಿದ್ದು, ಪ್ರತಿ ಸಂಘಕ್ಕೆ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಡವರಿಗೆ ಐದು ಸಾವಿರದಿಂದ ಹತ್ತು ಸಾವಿರ ನಿವೇಶನಗಳನ್ನು ಒದಗಿಸುವ ಯೋಜನೆ ರೂಪಿಸಲಾಗಿದೆ. ಅಲ್ಲದೆ, ಪ್ರತಿ ತಾಲ್ಲೂಕಿನಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪಿಸಿ ಸ್ಥಳೀಯ ಮಟ್ಟದಲ್ಲೇ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳ ಪ್ರಭಾವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಕಲಿ ಸುದ್ದಿಗಳನ್ನು ತಡೆಗಟ್ಟಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular