ಮಂಗಳೂರು: ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವರಾದ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡ ನಿರ್ಮಾಣಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಕಂದಾಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಪ್ರಜಾಸೌಧ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಗುದ್ದಲಿ ಪೂಜೆ ನೆರವೇರಿಸಿ ಮೊದಲ ಹಂತದ ಕಾಮಗಾರಿಗೆ ಹಣ ಬಿಡುಗಡೆ ಮಾಡಿದ್ದೆ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧದ ಕೆಲಸ ನಿಂತು ಹೋಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಾಮಗಾರಿ ಮುಂದುವರೆಯಲೇ ಇಲ್ಲ. ಇದನ್ನು ಪೂರ್ಣಗೊಳಿಸಲು ಮತ್ತೆ ನಾವೇ ಅಧಿಕಾರಕ್ಕೆ ಬರಬೇಕಾಯಿತು ಎಂದರು.
ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ 4.5 ಲಕ್ಷ ಕೋಟಿ ರೂ. ತೆರಿಗೆ ಕೊಡುತ್ತೇವೆ. ಕೇಂದ್ರ ರಾಜ್ಯಕ್ಕೆ ವಾಪಾಸ್ ಕೊಡುವುದು, ಸ್ಮಾರ್ಟ್ ಸಿಟಿ ಯೋಜನೆ ಸೇರಿ ಕೇವಲ 65 ಸಾವಿರ ಕೋಟಿ ರೂ. ಶೇ. 15-16 ರಷ್ಟು ಮಾತ್ರ ವಾಪಾಸ್ ಕೊಡುತ್ತಿದೆ. ಇದು ಕೇಂದ್ರವು ನಮ್ಮ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಅಲ್ಲವೇ? ಪ್ರಧಾನಿ ಮೋದಿಯವರಿಗೆ ಹೇಳಿ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ನಿಲ್ಲಿಸುವ ಕೆಲಸವನ್ನು ಇಲ್ಲಿನ ಸಂಸದರು, ಶಾಸಕರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ. ಸಚಿವ ಕೃಷ್ಣಬೈರೇಗೌಡರು ವಿಶೇಷ ಕಾಳಜಿ, ಸಾಕಷ್ಟು ಶ್ರಮ ವಹಿಸಿ ಜಿಲ್ಲೆಯನ್ನು ಪೋಡಿಮುಕ್ತ ಮಾಡುವ ದಿಕ್ಕಿನಲ್ಲಿ ಕೆಲಸಗಳು ಆಗಿವೆ ಎಂದು ಹೇಳಿದ್ದಾರೆ.
ಅತ್ಯಂತ ಪ್ರಜ್ಞಾವಂತರೇ ಇರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆಗಳು ನಡೆಯಬಾರದು. ಮನುಷ್ಯರು ಮನುಷ್ಯರನ್ನು ಪ್ರೀತಿಸುವ ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು. ಈ ಸಮಾಜವನ್ನು ನಾವು ಇನ್ನಷ್ಟು ಗಟ್ಟಿಗೊಳಿಸೋಣ. ಜೊತೆಗೆ ಅಸಮಾನತೆಯ ಸಮಾಜವನ್ನು ಸುಧಾರಿಸಿ ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಹೆಜ್ಜೆ ಹಾಕೋಣ ಎಂದು ಸಿಎಂ ಹೇಳಿದ್ದಾರೆ.
ನಾವು ನುಡಿದಂತೆ ನಡೆದಿದ್ದೇವೆ. ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಕೊಡುವ ಭರವಸೆ ನೀಡಿದ್ದೆವು. ಅದರಂತೆ ಪುತ್ತೂರಿಗೆ ಮೆಡಿಕಲ್ ಕಾಲೇಜು ಕೊಟ್ಟಿದ್ದೇವೆ. ಸದ್ಯ 250 ಬೆಡ್ ಗಳ ಆಸ್ಪತ್ರೆ ಮಾಡುತ್ತೇವೆ. ಆಮೇಲೆ ಮತ್ತೆ 250 ಬೆಡ್ ಗಳನ್ನು ಹೆಚ್ಚುವರಿಯಾಗಿ ವಿಸ್ತರಿಸುತ್ತೇವೆ ಎಂದು ತಿಳಿಸಿದ್ದಾರೆ.