HomeKarnatakaಮಾಫಿ ಸಾಕ್ಷಿ ಪ್ರಕರಣ: ಸಿಸಿಹೆಚ್ ಕೋರ್ಟ್​ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್‌

ಮಾಫಿ ಸಾಕ್ಷಿ ಪ್ರಕರಣ: ಸಿಸಿಹೆಚ್ ಕೋರ್ಟ್​ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟ ದರ್ಶನ್‌ 59ನೇ ಸಿಸಿಹೆಚ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರಿ ಅರ್ಜಿ ಸಲ್ಲಿಸಿದ್ದು, ಈ ಪ್ರಕ್ರಿಯೆಯಲ್ಲಾಗುವ ಲೋಪದೋಷಗಳ ಬಗ್ಗೆ ವಾದಿಸಲು ಅವಕಾಶ ನೀಡಬೇಕೆಂದು ದರ್ಶನ್ ಪರ ವಕೀಲರು ಸಿಸಿಹೆಚ್ ಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ದರ್ಶನ್ ಸೇರಿದಂತೆ ಯಾವುದೇ ಆರೋಪಿಗಳ ವಾದ ಆಲಿಸುವ ಅಗತ್ಯವಿಲ್ಲ ಎಂದು ಕೋರ್ಟ್ ಅರ್ಜಿ ತಿರಸ್ಕರಿಸಿತ್ತು. ಸಿಸಿಹೆಚ್ ನ್ಯಾಯಾಲಯದ ಈ ಆದೇಶ ಪ್ರಶ್ನಿಸಿ ದರ್ಶನ್ ಪರ ವಕೀಲರು ಇದೀಗ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ಅವರು ಈ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದಾರೆ. ಪ್ರದೋಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಪ್ರಕ್ರಿಯೆಯಲ್ಲಿ ತಮಗೆ ವಾದ ಮಂಡಿಸಲು ಅನುಮತಿ ನೀಡದಿರುವುದು ಸರಿಯಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಈ ಮನವಿಯನ್ನು ಆಲಿಸಿದ ಹೈಕೋರ್ಟ್, ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಇಂದು ಮಧ್ಯಾಹ್ನ 2:30ಕ್ಕೆ ನಿಗದಿಪಡಿಸಿದೆ. ಜೊತೆಗೆ ಈ ವಿಚಾರಣೆಯ ಕುರಿತು ರಾಜ್ಯದ ವಿಶೇಷ ಅಭಿಯೋಜಕರಿಗೆ ಮಾಹಿತಿ ನೀಡುವಂತೆ ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಪ್ರಕರಣದ 14ನೇ ಆರೋಪಿ ಪ್ರದೋಷ್ ಕೊಲೆಯಾದ ದಿನ ನಡೆದ ಸಂಪೂರ್ಣ ಘಟನೆಯನ್ನು ನ್ಯಾಯಾಲಯದ ಮುಂದೆ ತೆರೆದಿಡಲು ಮುಂದಾಗಿದ್ದು, ತನಗೆ ಮಾಫಿ ಸಾಕ್ಷಿಯಾಗಲು ಅವಕಾಶ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದನು. ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ದೊಡ್ಡ ತಿರುವು ಸಿಗುವ ಸಾಧ್ಯತೆ ಇರುವುದರಿಂದ, ಪ್ರದೋಷ್‌ನನ್ನು ಸಾಕ್ಷಿಯನ್ನಾಗಿ ಪರಿಗಣಿಸುವುದಕ್ಕೂ ಮುಂಚಿತವಾಗಿ ದರ್ಶನ್ ಸೇರಿದಂತೆ ಇತರ ಆರೋಪಿಗಳ ಪರ ವಾದವನ್ನು ಆಲಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು.

59ನೇ ಸಿಸಿಹೆಚ್ ಕೋರ್ಟ್ ಜಡ್ಜ್ ಸುಜಾತಾ ಮಡಿವಾಳಪ್ಪ ಅವರು ಪ್ರದೋಷ್ ಅರ್ಜಿಗೆ ಸಂಬಂಧಿಸಿದಂತೆ ದರ್ಶನ್ ಹಾಗೂ ಇತರೆ ಆರೋಪಿಗಳ ಆಕ್ಷೇಪಣೆಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಆದೇಶ ನೀಡಿದ್ದರು. ಕೋರ್ಟ್‌ನ ಈ ಆದೇಶದಿಂದ ದರ್ಶನ್‌ಗೆ ಹಿನ್ನಡೆಯಾಗಿದ್ದರಿಂದ, ಅವರು ಸಿಸಿಹೆಚ್ ಕೋರ್ಟ್ ಆದೇಶಕ್ಕೆ ತಡೆ ತರಲು ಹೈಕೋರ್ಟ್‌ನಲ್ಲಿ ಅರ್ಜಿಬ್ ಸಲ್ಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular