ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ದರ್ಶನ್ ತುರ್ತು ವಿಚಾರಣೆ ನಡೆಸುವಂತೆ ಹೈಕೋರ್ಟ್ ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ.
ಆರೋಪಿ ಪ್ರದೋಷ್ ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವುದಾಗಿ ಕೋರ್ಟ್ ಆದೇಶ ನೀಡಿತ್ತು. ಇದರಿಂದ ಆತಂಕಗೊಂಡಿರುವ ಕೊಲೆ ಆರೋಪಿ ನಟ ದರ್ಶನ್, ಪ್ರದೋಷ್ ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನಾಳೆ ವಿಚಾರಣೆಗೆ ಸಮನ್ಸ್ ನೀಡಿತ್ತು. ಆದರೆ ದರ್ಶನ್ ಪರ ವಕೀಲರು ಇಂದೇ ತುರ್ತು ವಿಚಾರಣೆ ನಡೆಸುವಂತೆ ಹೈಕೋರ್ಟ್ ನಲ್ಲಿ ಮತ್ತೆ ಅರ್ಜಿ ಸಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ, ಇಂದು ವಿಚಾರಣೆ ನಡೆಸಲು ಸಮ್ಮತಿ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಸಂಜೆ ವೇಳೆಗೆ ದರ್ಶನ್ ಅರ್ಜಿ ವಿಚಾರಣೆ ನಡೆಯಲಿದೆ.
ಇನ್ನು ದರ್ಶನ್ ಪರ ವಕೀಲ ಹಷ್ಮತ್ ಪಾಷಾ, ಮಾಫಿ ಸಾಕ್ಷಿ ಆದೇಶದ ಪ್ರಕ್ರಿಯೆಯಲ್ಲಿ ಲೋಪದೋಷಗಳಿವೆ ಎಂದು ಮನವಿ ಮಾಡಿದ್ದಾರೆ. ಈ ವೇಳೆ ದರ್ಶನ್ ಪರ ವಕೀಲರಿಗೆ ಇದು ಎರಡನೇ ಸುತ್ತಿನ ಹೋರಾಟವೇ? ಎಂದು ಪ್ರಶ್ನಿಸಿರುವ ಹೈಕೋರ್ಟ್ ಪೀಠ, ಎಸ್ ಪಿಪಿ ಪ್ರಸನ್ನ ಕುಮಾರ್ ಅವರಿಗೆ ಮಾಹಿತಿ ನೀಡುವಂತೆ ಸೂಚಿಸಿದೆ.

