ನವದೆಹಲಿ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಮತ್ತಷ್ಟು ಸಂಕಷ್ಟ ಎದುರಾಗಿದೆ. ಮಾಫಿ ಸಾಕ್ಷಿ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ. ಇದರಿಂದಾಗಿ ದರ್ಶನ್ ಗೆ ತೀವ್ರ ಹಿನ್ನಡೆಯಾಗಿದೆ.
ಪ್ರಕರಣದಲ್ಲಿ ಮಹತ್ವದ ತಿರುವು ನೀಡಿದ್ದ ಆರೋಪಿ ಪ್ರದೂಷ್, ನ್ಯಾಯಾಲಯದ ಮುಂದೆ ಮಾಫಿ ಸಾಕ್ಷಿಯಾಗಲು ಒಪ್ಪಿಕೊಂಡಿದ್ದರು. ಆದರೆ, ಸಿಆರ್ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಸೂಕ್ತ ನಿಯಮಗಳನ್ನು ಪಾಲಿಸದೆ ಹಾಗೂ ಸಹ-ಆರೋಪಿಗಳ ಗಮನಕ್ಕೆ ತರದೆ ಆತನಿಗೆ ಮಾಫಿ ಸಾಕ್ಷಿ ಸ್ಥಾನಮಾನ ನೀಡಲಾಗಿದೆ ಎಂದು ಆರೋಪಿಸಿ ವಿಜಯಲಕ್ಷ್ಮಿ ಅವರು ಈ ಹಿಂದೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದ ನಂತರ, ಅವರು ಸುಪ್ರೀಂ ಕೋರ್ಟ್ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.
ನ್ಯಾಯಮೂರ್ತಿಗಳ ಪೀಠದಲ್ಲಿ ನಡೆದ ವಾದ-ಪ್ರತಿವಾದದ ಬಳಿಕ, ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್ ತೆಗೆದುಕೊಂಡ ನಿರ್ಧಾರದಲ್ಲಿ ಯಾವುದೇ ಕಾನೂನುಬಾಹಿರ ಅಂಶಗಳಿಲ್ಲ ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್, ವಿಜಯಲಕ್ಷ್ಮಿ ಅವರ ಅರ್ಜಿಯನ್ನು ವಜಾಗೊಳಿಸಿದೆ.

