ದಾವಣಗೆರೆ: ದಾವಣಗೆರೆ ಮಹಾ ನಗರ ಪಾಲಿಕೆಯಲ್ಲಿ ಖಾಲಿ ಇರುವ 210 ನೇರಪಾವತಿ ಪೌರ ಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಲ್ಪರ್, ಲೋಡರ್ ಹಾಗೂ ಮ್ಯಾನ್ಯೂಯಲ್ ಸ್ಕ್ಯಾವೆಂಜರ್ ಅವಲಂಬಿತರಿಗೆ ಅರ್ಜಿ ನಮೂನೆಗಳನ್ನು ಮಹಾನಗರಪಾಲಿಕೆಯಿಂದ ವಿತರಿಸಲಾಗಿದೆ.
ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಸಲ್ಲಿಸಲು ಸೆ.11 ರವರೆಗೆ ಕಾಲಾವಕಾಶ ನೀಡಲಾಗಿದೆ. ಮಹಾ ನಗರ ಪಾಲಿಕೆಯಲ್ಲಿ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿರಲಿದೆ. ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ ಹೆಲ್ಪರ್, ಲೋಡರ್‍ಗಳ ನೇಮಕಾತಿಗೆ ಅರ್ಹತೆ ಹೊಂದಿದ್ದು, ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ನೀಡದಂತೆ ಅರ್ಜಿ ನಮೂನೆಗಳನ್ನು ನೇರವಾಗಿ ಅಭ್ಯರ್ಥಿಗಳಿಗೆ ಮಾತ್ರವೇ ವಿತರಿಸಿದ್ದು, ಖುದ್ದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
ಯಾವುದೇ ಮಧ್ಯವರ್ತಿಗಳ ಆಮಿಷ, ಹೆದರಿಕೆಗೆ ಒಳಗಾಗದಂತೆ, ಯಾವುದೇ ಹಂತದಲ್ಲಿಯೂ ಯಾರಿಗೂ ಹಣ ನೀಡಬಾರದು. ಹಾಗೂ ನೇಮಕಾತಿ ಮಾಡಿಸುವುದಾಗಿ ಆಸೆ ತೋರಿಸಿ ಹಣ ಯಾಚಿಸಿದಲ್ಲಿ ದೂರು ನೀಡಬಹುದೆಂದು ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ತಿಳಿಸಿದ್ದಾರೆ.
ಆಧುನಿಕ ಹೈನುಗಾರಿಕೆ ತರಬೇತಿ
ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿ ಸೆಪ್ಟೆಂಬರ್ 8 ಮತ್ತು 9 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ
ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಹಾಯಧನ, ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಅರ್ಜಿ ಸಲ್ಲಿಸಲು ಅಕ್ಟೋಬರ್ 1 ಕೊನೆಯ ದಿನವಾಗಿರುತ್ತದೆ. ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ http://kmcdc.karnataka.gov.in ಅಥವಾ ಜಿಲ್ಲಾ ನಿಗಮದ ದೂ.ಸಂ: 080-29903994, 886753779, 08192-230934 ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

