ಭಾರೀ ಕುತೂಹಲಕ್ಕೆ ಕಾರಣವಾಗಿರುವ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಆಮ್ ಆದ್ಮಿ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಘೋಷಣೆಯಾಗಲಿದೆ.
ಆಮ್ ಆದ್ಮಿ ಪಕ್ಷ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕೆ.ಎಸ್. ಶಿವಕುಮಾರಪ್ಪ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಶುಕ್ರವಾರ ಅವರು ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಾರ್ಚ್ 23 ಕೊನೆಯ ದಿನವಾಗಿದೆ.
ಕೆ.ಎಸ್. ಶಿವಕುಮಾರಪ್ಪ ಆಮ್ ಆದ್ಮಿ ಪಕ್ಷದಿಂದ ಜಿಲ್ಲಾಧ್ಯಕ್ಷರು. ವೃತ್ತಿಯಲ್ಲಿ ಕಳೆದ ಮೂರು ದಶಕಗಳಿಂದ ಲೆಕ್ಕ ಪರಿಶೋಧಕರಾಗಿದ್ದಾರೆ. ಮೂಲತಃ ರೈತಾಪಿ ಕುಟುಂಬದಿಂದ ಬಂದಿರುವ ಅವರು ದಾವಣಗೆರೆ ಜಿಲ್ಲಾ ಲೆಕ್ಕ ಪರಿಶೋಧಕರ ಸಂಘದ ಅಧ್ಯಕ್ಷರಾಗಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.
ಜಿಲ್ಲಾ ರೋಟರಿ ಸಂಸ್ಥೆಯ ಅಧ್ಯಕ್ಷರಾಗಿ ಅನೇಕ ಸಾಮಾಜಿಕ ಚಟುವಟಿಕೆಗಳನ್ನು ಮಾಡುತ್ತಾ ಜನಾನುರಾಗಿ ಗಳಾಗಿದ್ದಾರೆ. ಆಮ್ ಆದ್ಮಿ ಪಕ್ಷದಲ್ಲಿ ಕಳೆದ ಮೂರು ವರ್ಷಗಳಿಂದ ಜಿಲ್ಲಾಧ್ಯಕ್ಷರಾಗಿ ದೇಶದ, ರಾಜ್ಯದ ಹಾಗೂ ದಾವಣಗೆರೆ ಜಿಲ್ಲೆಯ ಅನೇಕ ಜನಪರ ಹೋರಾಟಗಳನ್ನು ರೂಪಿಸುವ ಮೂಲಕ ಸರ್ಕಾರಕ್ಕೆ ಕಿವಿ ಹಿಂಡುವ ಕಾರ್ಯವನ್ನು ಮಾಡಿಕೊಂಡು ಬಂದಿದ್ದಾರೆ.
ಇಂತಹ ವಿದ್ಯಾವಂತ, ದಕ್ಷ ಹಾಗೂ ಪ್ರಾಮಾಣಿಕ ಅಭ್ಯರ್ಥಿಯನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಜನತೆ ಆಯ್ಕೆ ಮಾಡುವ ಮೂಲಕ ವಂಶಪಾರಂಪರ್ಯ ರಾಜಕಾರಣಕ್ಕೆ ತಿಲಾಂಜಲಿ ಹಾಡಿ ಪರ್ಯಾಯ ರಾಜಕಾರಣಕ್ಕೆ ಮುನ್ನುಡಿ ಬರೆಯಬೇಕೆಂದು ಪಕ್ಷವು ಪ್ರಕಟಣೆಯಲ್ಲಿ ತಿಳಿಸಿದೆ.

