ಶಾಮನೂರು ಶಿವಶಂಕರಪ್ಪ ನಿಧನ ಕಾರಣ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಎದುರಾಗಿದೆ. ಉಪಚುನಾವಣೆ ದಿನಾಂಕ ಈ ತಿಂಗಳಿನಲ್ಲಿ ಘೋಷಣೆಯಾಗುವ ನಿರೀಕ್ಷೆ ಇದೆ. ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಇನ್ನೂ ಸಹ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಇದುವರೆಗೂ ಬಿಜೆಪಿ ಗೆದ್ದಿಲ್ಲ. ಈ ಬಾರಿ ಶಾಮನೂರು ಶಿವಶಂಕರಪ್ಪ ಅನುಪಸ್ಥಿತಿಯಲ್ಲಿ ಗೆದ್ದು ಪಕ್ಷದ ಬಾವುಟ ಹಾರಿಸಲು ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದೆ. ಆದರೆ ಅಭ್ಯರ್ಥಿ ಯಾರು? ಎಂಬುದು ಇನ್ನೂ ನಿಗೂಢ.
ಬಿಜೆಪಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾರ್ಯಾಗಾರ ಮತ್ತು ವಿಶೇಷ ಸಭೆಯನ್ನು ನಡೆಸಿದೆ. ದಾವಣಗೆರೆ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ, ರಾಜ್ಯ ಸಮಿತಿಯ ಸದಸ್ಯರು ಹಾಗೂ ಉಸ್ತುವಾರಿ ಮೇಘರಾಜ್, ಮಾಜಿ ಮುಖ್ಯಸಚೇತಕ ಶಿವಯೋಗಿ ಸ್ವಾಮಿ, ಮಾಜಿ ಅಧ್ಯಕ್ಷ ಯಶವಂತರಾವ್ ಜಾದವ್, ಜಿಲ್ಲಾ ಪದಾಧಿಕಾರಿಗಳು ಮತ್ತು ಪ್ರಮುಖರು ಪಾಲ್ಗೊಂಡಿದ್ದರು.
ದಾವಣಗೆರೆ ದಕ್ಷಿಣದ ಟಿಕೆಟ್ ಆಕಾಂಕ್ಷಿಗಳಲ್ಲಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾದವ್ ಸಹ ಒಬ್ಬರು. ಸದ್ಯದ ಮಟ್ಟಿಗೆ ಬಿಜೆಪಿ ಅಭ್ಯರ್ಥಿ ಅಂತಿಮಗೊಳಿಸಿಲ್ಲ. ಚುನಾವಣಾ ದಿನಾಂಕ ಘೋಷಣೆ ಬಳಿಕ ಈ ಕುರಿತು ಗಮನಹರಿಸುವ ನಿರೀಕ್ಷೆ ಇದೆ.
ಟಿಕೆಟ್ ಆಕಾಂಕ್ಷಿಗಳು: ದಾವಣಗೆರೆ ದಕ್ಷಿಣದ ಟಿಕೆಟ್‌ಗಾಗಿ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ ಬಣದಿಂದ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಶ್ರೀನಿವಾಸ್ ದಾಸಕರಿಯಪ್ಪ ಸೇರಿದಂತೆ ಹಲವರ ಹೆಸರುಗಳು ಕೇಳಿ ಬರುತ್ತಿವೆ.
ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಬಣದಿಂದ ಕಳೆದ ಬಾರಿ ಪರಾಜಿತರಾಗಿದ್ದ ಅಜಯ್ ಕುಮಾರ್ಗೆ ಟಿಕೆಟ್ ನೀಡಬೇಕೆಂಬ ಕೂಗು ಇದೆ. 2024ರ ಲೋಕಸಭೆ ಚುನಾವಣೆ ಬಳಿಕ ದಾವಣಗೆರೆ ಬಿಜೆಪಿ 2 ಬಣವಾಗಿದ್ದು, ಪಕ್ಷದ ನಾಯಕರ ತಲೆ ನೋವಿಗೆ ಕಾರಣವಾಗಿದೆ.
ಮತ್ತೊಂದು ಕಡೆ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಬೇಡ, ಎನ್‌ಡಿಎ ಅಭ್ಯರ್ಥಿ ಕಣಕ್ಕಿಳಿಸೋಣ ಎಂಬ ಚರ್ಚೆಗಳು ಸಾಗಿದೆ. ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷವಾದ ಜೆಡಿಯು ಪಕ್ಷದ ರಾಜ್ಯಾಧ್ಯಕ್ಷ ಮಾಜಿ ಸಿಎಂ ಜೆ.ಎಚ್.ಪಟೇಲ್ ಪುತ್ರ ಮಹಿಮಾ ಪಟೇಲ್ ಅವರನ್ನು ಅಭ್ಯರ್ಥಿ ಮಾಡೋಣ ಎಂಬ ಚಿಂತನೆ ಇದೆ.
ಈ ಕುರಿತು ಬಿಹಾರ ಮುಖ್ಯಮಂತ್ರಿ, ಜೆಡಿಯು ವರಿಷ್ಠ ನಿತೀಶ್ ಕುಮಾರ್ ತೀರ್ಮಾನ ಕೈಗೊಳ್ಳಬೇಕಿದೆ. ಆದರೆ ಈ ಪ್ರಸ್ತಾವನೆಗೆ ರಾಜ್ಯದ ಬಿಜೆಪಿ ನಾಯಕರು ಒಪ್ಪಲಿದ್ದಾರೆಯೇ? ಎಂಬುದು ಸದ್ಯದ ಪ್ರಶ್ನೆಯಾಗಿದೆ.
ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಪ್ರಭಾವಕ್ಕಾಗಿಯೇ ಇದುವರೆಗೂ ಬಿಜೆಪಿಗೆ ಗೆಲ್ಲಲು ಸಾಧ್ಯವಾಗಿರಲಿಲ್ಲ. ಈಗ ಅವರ ಅನುಪಸ್ಥಿತಿಯಲ್ಲಿ ಚುನಾವಣೆ ಎದುರಾಗಿದೆ. ಶಾಮನೂರು ಶಿವಶಂಕರಪ್ಪ ಕುಟುಂಬದ ಪ್ರಭಾವವನ್ನು ಮೀರಿ ಕ್ಷೇತ್ರದಲ್ಲಿ ಗೆಲ್ಲಬೇಕು ಎಂಬುದು ಬಿಜೆಪಿಯ ತಂತ್ರವಾಗಿದೆ.

