ದಾವಣಗೆರೆ: ಭದ್ರಾ ಡ್ಯಾಂನಿಂದ ಮೇಲ್ದಂಡೆ ಯೋಜನೆಗೆ ನೀರು ಬಿಡುಗಡೆ ಆದೇಶ ವಿರೋಧಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಇಂದು ದಾವಣಗೆರೆ ಬಂದ್ ಗೆ ಕರೆ ನೀಡಿದ್ದು, ಸಾರಿಗೆ ಸಂಚಾರ ಅಸ್ತವ್ಯಸ್ತಗೊಂಡಿದೆ.
ಬೀದಿಗಿಳಿದು ಹೋರಾಟ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರು, ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಭದ್ರಾ ಡ್ಯಾಂನಿಂದ ಮೇಲ್ದಂಡೆ ಯೋಜನೆಗೆ ನೀರು ಬಿಡುಗಡೆ ಆದೇಶ ವಿರೋಧಿಸಿ ಹಾಗೂ ಗುಟ್ಕಾ ನಿಷೇಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ದಾವಣಗೆರೆ ಬಂದ್‌ಗೆ ಕರೆ ನೀಡಿದೆ. ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ.
ಬಿಜೆಪಿ ಕಾರ್ಯಕರ್ತರು ನಗರದ ಹದಡಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕೆ.ಎಸ್.ಆರ್.ಟಿ.ಸಿ ಬಸ್ ಬರುತ್ತಿದ್ದಂತೆ ಬಿಜೆಪಿ ಮುಖಂಡ ಲೋಕಿಕೆರೆ ನಾಗರಾಜ್ ನೇತೃತ್ವದಲ್ಲಿ ಸಾರಿಗೆ ಬಸ್ ತಡೆದು, ಚಾಲಕನಿಗೆ ಎಚ್ಚರಿಕೆ ನೀಡಿದ್ದಾರೆ. ಬಸ್ ಸಂಚಾರಕ್ಕೆ ತಡೆ ನೀಡಲಾಗಿದೆ. ಮತ್ತೊಮ್ಮೆ ಬಂದರೆ ಬಸ್ ಗಳಿಗೆ ಕಲ್ಲು ತೂರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದರು.
ಪ್ರತಿಭಟನಾಕಾರರು ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ದಾವಣಗೆರೆ ನಗರದ ಸಿದ್ದಗಂಗಾ ಶಾಲೆ ಸೇರಿದಂತೆ ಕೆಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

