ಧಾರವಾಡ: ಹುಬ್ಬಳ್ಳಿ, ಧಾರವಾಡದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ಸತತ ವಾಗಿ ಒಂದು ಗಂಟೆಗೂ ಅಧಿಕ ಕಾಲ ಮಳೆಯಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ಬಿತ್ತನಗೆ ಭೂಮಿ ಸಿದ್ಧ ಮಾಡಿಕೊಳ್ಳಲು ಈ ಮಳೆಯಿಂದ ಅನುಕೂಲವಾಗಲಿದೆ.
ನಾಲ್ಕು ದಿನಗಳ ಹಿಂದೆಯಷ್ಟೇ ಅಲ್ಪ ಪ್ರಮಾಣದಲ್ಲಿ ಮಳೆಯಾಗಿತ್ತು. ಭಾನುವಾರ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ಭಾನುವಾರ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಮೇಕೆ ಮೆಯಿಸಲು ಹೋಗಿದ್ದ ವೃದ್ಧರೊಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಧಾರವಾಡ ತಾಲೂಕಿನ ಮುಗದ ಗ್ರಾಮದ ಬಳಿ ಹೊಲದಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದ ರಸೂಲ್ ಸಾಬ್ ಚಾಂದವಾಲೆ(62) ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೇಕೆ ಮೇಯಿಸಿಕೊಂಡು ಗ್ರಾಮಕ್ಕೆ ಬರುವಾಗ ಸಿಡಿಲು ಬಡಿದಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುಬ್ಬಳ್ಳಿಯ ವಿದ್ಯಾನಗರ, ನವನಗರ, ದೇಶಪಾಂಡೆ ನಗರದಲ್ಲಿ ಗುಡುಗು ಸಹಿತ ಮಳೆಯಾಗಿದೆ. ಕೇಶ್ವಾಪುರದ ಹಲವು ಕಡೆ ಆಲಿಕಲ್ಲು ಸಹಿತ ಮಳೆಯಾಗಿದ್ದು, ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿದು ಸಂಚಾರಕ್ಕೆ ತೊಂದರೆಯಾಗಿತ್ತು.