ದೇವನಹಳ್ಳಿ: ಶ್ರೀರಾಮನವಮಿ ಹಬ್ಬದ ಆಚರಣೆ ನಿಮಿತ್ತ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ 400ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೆಟ್ಟೇನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ನಡೆದಿದೆ.
ದೇವಸ್ಥಾನದಲ್ಲಿ ವಿತರಿಸಿದ ಪ್ರಸಾದ ಸೇವಿಸಿ 400ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನು ಅರದೇಶನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಹುತೇಕರು ಚೇತರಿಸಿಕೊಂಡಿದ್ದಾರೆ.
ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲಿ ಬೀಡು ಬಿಟ್ಟು ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥ ರೋಗಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಪ್ರಸಾದ ಸೇವಿಸಿದ ಬಳಿಕ ರಾತ್ರಿ 10 ಗಂಟೆಯಿಂದ ಗ್ರಾಮಸ್ಥರ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದಿದೆ. ಕೆಲವರಿಗೆ ಹೊಟ್ಟೆನೋವು, ವಾಂತಿ-ಭೇದಿಯಾಗಿ ಅಸ್ವಸ್ಥಗೊಂಡಿದ್ದಾರೆ. ಸುಮಾರು 400 ಜನರ ಆರೋಗ್ಯ ಏರುಪೇರಾಗಿದೆ. ಕೆಲವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಇನ್ನು ಕೆಲವರು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಶಾ ತಂಡ, ಆರ್ಆರ್ಟಿ ತಂಡ, ಆರೋಗ್ಯ ಸಿಬ್ಬಂದಿ ಮಾನಿಟರ್ ಮಾಡ್ತಿದ್ದಾರೆ. ಮನೆ ಮನೆಗೆ ಭೇಟಿ ಕೊಟ್ಟು ಮಾಹಿತಿ ಪಡೆದು ಚಿಕಿತ್ಸೆ ಕೊಡುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

