ಸರ್ಕಾರದ ನಿಯಮಾನುಸಾರ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಗತ್ಯ ಮಾಹಿತಿಯುಳ್ಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಧಾರವಾಡ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ ಅವರು ಹೇಳಿದರು.
ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಅನ್ನಭಾಗ್ಯ ಯೋಜನೆಯಡಿ ಪಡಿತರ ವಿತರಿಸುವ ಅಂಗಡಿಗಳಲ್ಲಿ ಮುಖ್ಯಮಂತ್ರಿಗಳ ಭಾವಚಿತ್ರ ಸೇರಿದಂತೆ ಯೋಜನೆಗೆ ಸಂಬಂಧಿಸಿದ ಮಾಹಿತಿ ಹಾಗೂ ದರಪಟ್ಟಿ ಒಳಗೊಂಡ ಬೋರ್ಡ್ ಗಳನ್ನು ಅಳವಡಿಸಬೇಕು. ಸಾರ್ವಜನಿಕರಿಗೆ ಪಡಿತರದ ದರ ಹಾಗೂ ವಿತರಿಸಲಾಗುವ ಸಾಮಗ್ರಿಗಳ ಕುರಿತು ಸ್ಪಷ್ಟ ಮಾಹಿತಿ ದೊರೆಯುವಂತೆ ವ್ಯವಸ್ಥೆ ಮಾಡಬೇಕು. ಜಿಲ್ಲೆಯ ಯಾವುದೇ ಅನ್ನಭಾಗ್ಯ ಅಂಗಡಿಯಲ್ಲಿ ಬೋರ್ಡ್ ಅಥವಾ ದರಪಟ್ಟಿ ಅಳವಡಿಸದೇ ಇದ್ದರೆ, ಅಂತಹ ಅಂಗಡಿಗಳ ಕುರಿತು ಪರಿಶೀಲನೆ ನಡೆಸಿ, ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲ ಅನ್ನಭಾಗ್ಯ ಅಂಗಡಿಗಳಲ್ಲಿ ಒಂದು ವಾರದೊಳಗಾಗಿ ಅಗತ್ಯ ಬೋರ್ಡ್‍ಗಳನ್ನು ಅಳವಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ನಡೆಸಬೇಕು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಅವರು ಹೇಳಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಂಬಂಧಿತ ಕಾಮಗಾರಿಗಳನ್ನು ಕೈಗೊಳ್ಳುವ ಸಂದರ್ಭದಲ್ಲಿ ಲೈನ್ ಮನ್ ಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ವಿದ್ಯುತ್ ಕಂಬ, ಲೈನ್ ದುರಸ್ತಿ ಸೇರಿದಂತೆ ಅಪಾಯಕಾರಿ ಕಾಮಗಾರಿಗಳಿಗೆ ಸಾರ್ವಜನಿಕರನ್ನು ಬಳಸಿಕೊಳ್ಳಬಾರದು. ಪ್ರತಿಯೊಂದು ಗ್ರಾಮದಲ್ಲಿಯೂ ವಿದ್ಯುತ್ ಕಾಮಗಾರಿಗಳನ್ನು ಇಲಾಖೆಯ ನಿಯಮಾನುಸಾರ ತರಬೇತಿ ಪಡೆದ ಲೈನ್ ಮನ್ ಗಳೇ ನೇರವಾಗಿ ನಿರ್ವಹಿಸಬೇಕು. ಸಾರ್ವಜನಿಕರನ್ನು ಕೆಲಸಕ್ಕೆ ಬಳಸಿಕೊಳ್ಳುವುದರಿಂದ ಅವರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಈ ಬಗ್ಗೆ ವಿದ್ಯುತ್ ಇಲಾಖೆಯ ಅಧಿಕಾರಿಗಳು ಹಾಗೂ ಲೈನ್‍ಮನ್‍ಗಳು ವಿಶೇಷ ಗಮನಹರಿಸಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಈ ಹಿಂದೆ ವಿದ್ಯುತ್ ಇಲಾಖೆಯ(ಕೆಇಬಿ) ಕೆಲಸದ ಸಂದರ್ಭದಲ್ಲಿ ಲೈನ್ ಮನ್ ಗಳ ನಿರ್ಲಕ್ಷ್ಯದಿಂದಾಗಿ ಮೂವರು ಸಾರ್ವಜನಿಕರು ಮೃತಪಟ್ಟಿರುವ ಘಟನೆಗಳು ನಡೆದಿವೆ. ಇಂತಹ ದುರ್ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ವಿದ್ಯುತ್ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಂಬಂಧಿಸಿದ ಅಧಿಕಾರಿಗಳು ತಮ್ಮ ಸಿಬ್ಬಂದಿಗೆ ಸೂಚಿಸಬೇಕು. ಯಾವುದೇ ಗ್ರಾಮದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುವಾಗ ಸಂಬಂಧಿಸಿದ ಲೈನ್ ಮನ್ ಗಳು ಸ್ಥಳದಲ್ಲಿದ್ದು, ಕಾಮಗಾರಿಯ ಸಂಪೂರ್ಣ ಜವಾಬ್ದಾರಿ ವಹಿಸಬೇಕು. ಸಾರ್ವಜನಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ್ ಅವರು ಮಾತನಾಡಿ, ಮುಖ್ಯಮಂತ್ರಿ ಅವರ ನಿರ್ದೇಶನದಂತೆ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನಗರ ಪ್ರದೇಶದ ಪ್ರತಿಯೊಂದು ವಾರ್ಡ್ ಮಟ್ಟದಲ್ಲಿ ಆರು ಜನರನ್ನು ಆಯ್ಕೆ ಮಾಡಿ ಸಮಿತಿ ರಚಿಸಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಅದೇ ರೀತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಆರು ಜನ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯುವನಿಧಿ ಯೋಜನೆಯಡಿ ನೋಂದಾಯಿಸಿರುವ ನಿರುದ್ಯೋಗಿ ಯುವಕರಿಗೆ ಮೂರು ತಿಂಗಳ ತರಬೇತಿ ನೀಡಲು ಅಗತ್ಯ ವೇಳಾಪಟ್ಟಿ ಸಿದ್ಧಪಡಿಸಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಧಾರವಾಡ ಜಿಲ್ಲೆಯ ಬಸ್ ನಿಲ್ದಾಣಗಳಲ್ಲಿನ ಶೌಚಾಲಯಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಬಸ್ ಗಳನ್ನು ತಿಂಗಳಿಗೆ ಒಮ್ಮೆ ಕಡ್ಡಾಯವಾಗಿ ಡೀಪ್ ಕ್ಲೀನ್ ಮಾಡುವ ವ್ಯವಸ್ಥೆ ಕೈಗೊಳ್ಳಬೇಕು. ಇದರ ಜೊತೆಗೆ ಬಸ್ ನಿಲ್ದಾಣಗಳ ಸುತ್ತಮುತ್ತಲಿನ ಪ್ರದೇಶವನ್ನು ತಂಬಾಕು ಮುಕ್ತ ಪ್ರದೇಶವನ್ನಾಗಿ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ: ಯುವನಿಧಿ ಯೋಜನೆಯಡಿ ಇಲ್ಲಿಯವರೆಗೆ 13,215 ಅರ್ಜಿಗಳು ಸ್ವೀಕೃತವಾಗಿದ್ದು, ಡಿ.ಬಿ.ಟಿ ಮೂಲಕ 11,886 ಫಲಾನುಭವಿಗಳಿಗೆ ಸಹಾಯಧನ ಜಮೆಯಾಗಿದೆ. ಇಲ್ಲಿಯವರೆಗೆ ಜಿಲ್ಲೆಯ ಯುವನಿಧಿ ಫಲಾನುಭವಿಗಳಿಗೆ ರೂ.36,66,31,500 ಸಹಾಯಧನ ಜಮೆ ಆಗಿದೆ. ಶಕ್ತಿ ಯೋಜನೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ 43,78,62,769 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಸರಕಾರದಿಂದ ಸುಮಾರು ರೂ. 9,66,57,12,217 ರೂಪಾಯಿ ಬಿಡುಗಡೆಯಾಗಿದೆ.
ಗೃಹ ಜ್ಯೋತಿ ಯೋಜನೆಯಡಿ 5,73,052 ಫಲಾನುಭವಿಗಳು ಇದ್ದು, ಸರ್ಕಾರದಿಂದ ಒಟ್ಟು 82527.20 ಲಕ್ಷ ರೂಪಾಯಿ ಬಿಡುಗಡೆಯಾಗಿದೆ. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 3,77,301 ಫಲಾನುಭವಿಗಳಿಗೆ ಒಟ್ಟು ಮೊತ್ತ ರೂ.23,45,73,92,000 ಹಣ ಬಿಡುಗಡೆಯಾಗಿದೆ. ಜಿಲ್ಲೆಯಲ್ಲಿ ಅಗಸ್ಟ್ ಮಾಹೆಯಲ್ಲಿ 74 ಫಲಾನುಭವಿಗಳು ಮರಣ ಹೊಂದಿರುತ್ತಾರೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ 3,75,996 ಫಲಾನುಭವಿಗಳು ಇದ್ದಾರೆ.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಸುಧೀರ ಎಸ್. ಬೋಳಾರ, ಮುರಗಯ್ಯಾ ವಿರಕ್ತಮಠ, ರತ್ನಾ ತೇಗೂರಮಠ, ರೇಹನ್ ರಝಾ ಐನಾಪೂರಿ, ಶಾಂತಪ್ಪ ಎಸ್.ಅಕ್ಕಿ ಹಾಗೂ ಸದಸ್ಯರಾದ ಅರವಿಂದ ಏಗನಗೌಡರ, ಬಸಪ್ಪ ಮಹಾಬಲೇಶ್ವರ ಬಾವಕಾರ ಅವರು ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಸ್ವಾಗತಿಸಿ, ವಂದಿಸಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ವರ್ಧಮಾನ ಹಿರೇಗೌಡರ, ಶಿವಾನಂದ ಭೂಮಣ್ಣನವರ, ವಿನಾಯಕ ಕುರುಬರ, ಸಾವಿತ್ರಿ ಬಸವರಾಜ್ ಭಗವತಿ, ಸೇರಿದಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

