ಬೆಂಗಳೂರು: ವಿದ್ಯಾರ್ಥಿಗಳು ಜವಾಬ್ದಾರಿಯಿಂದ ಡಿಜಿಟಲ್ ಪ್ಲಾಟ್ಫಾರ್ಮ್ ಬಳಕೆ ಮಾಡುವ ನಿಟ್ಟಿನಲ್ಲಿ ಶಿಕ್ಷಕರಿಗೆ ತರಬೇತಿ, ಪೋಷಕರಿಗೆ ಜಾಗೃತಿ ಮತ್ತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಅಂಶ ಇರುವ ಕರಡು ನೀತಿ ರೂಪಿಸಲಾಗಿದೆ. ಸಾರ್ವಜನಿಕರ ಅಭಿಪ್ರಾಯ ಪಡೆದುಕೊಂಡು ಅಂತಿಮ ನೀತಿ ಪ್ರಕಟಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಆರೋಗ್ಯಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಆರೋಗ್ಯ ಇಲಾಖೆ, ಪ್ರಾಥಮಿಕ ಶಿಕ್ಷಣ ಇಲಾಖೆ, ನಿಮ್ಹಾನ್ಸ್ ಸಂಸ್ಥೆ ಸಹಯೋಗದಲ್ಲಿ ಅಧ್ಯಯನ ನಡೆಸಲಾಗಿದ್ದು, ಇದರ ಪ್ರಕಾರ ನಾಲ್ವರಲ್ಲಿ ಒಬ್ಬ ವಿದ್ಯಾರ್ಥಿ ಡಿಜಿಟಲ್ ಸಮಸ್ಯೆಗೆ ತುತ್ತಾಗಿರುವುದು ಕಂಡುಬಂದಿದೆ. ಹೀಗಾಗಿ ಆರಂಭಿಕ ಹಂತದಲ್ಲಿ ಮಕ್ಕಳ ತೊಂದರೆ ಗುರುತು ಮಾಡಿ ಪರಿಹಾರ ಕಂಡುಕೊಳ್ಳಲು ಜವಾಬ್ದಾರಿಯುತ ಡಿಜಿಟಲ್ ಬಳಕೆ ಬಗ್ಗೆ ನೀತಿ ರೂಪಿಸಲಾಗುತ್ತಿದೆ. ಮಕ್ಕಳಲ್ಲಿ ಅತಿಯಾದ ಡಿಜಿಟಲ್ ಪ್ಲಾಟ್ಫಾರ್ಮ್ ಬಳಕೆ ಪರಿಣಾಮ ವಿದ್ಯಾರ್ಥಿಗಳಲ್ಲಿ ಉದ್ವೇಗ, ನಿದ್ರಾಹೀನತೆ, ಏಕಾಗ್ರತೆಯ ಕೊರತೆ ಸೇರಿ ಕೆಲವು ಸಮಸ್ಯೆ ಕಾಣಿಸುತ್ತಿವೆ. ಸಾಮಾಜಿಕ ಪ್ರತ್ಯೇಕತೆ ಮನೋಭಾವ ಬೆಳೆಯಲು ಕಾರಣವಾಗುತ್ತಿದೆ ಎಂದು ಅಧ್ಯಯನ ತಿಳಿಸಿದೆ ಎಂದು ಹೇಳಿದ್ದಾರೆ.
ಆರೋಗ್ಯ ಇಲಾಖೆಯ https:hfwcom.karnataka.gov.in ಜಾಲತಾಣದಲ್ಲಿ ಕರಡು ಪ್ರಕಟಿಸಲಾಗಿದೆ. ಸಾರ್ವಜನಿಕರಿಂದ ಅಭಿಪ್ರಾಯ ಆಹ್ವಾನಿಸಲಾಗಿದ್ದು, ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು, ಆಸಕ್ತರು ತಮ್ಮ ಅಭಿಪ್ರಾಯ ಮತ್ತು ಸಲಹೆಗಳಿದ್ದಲ್ಲಿ 15 ದಿನಗಳ ಒಳಗೆ [email protected] ಇ-ಮೇಲ್ ಗೆ ಕಳುಹಿಸಬಹುದಾಗಿದೆ.

