ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ಬದಲಿಗೆ ಇಂದಿರಾ ಆಹಾರ ಕಿಟ್ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ಈಗಾಗಲೇ ನಿರ್ಣಯ ಕೈಗೊಳ್ಳಲಾಗಿದೆ.
ಸೋಮವಾರ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ ಬಗ್ಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿ ತಿಂಗಳು 1,25,08,262 ಇಂದಿರಾ ಆಹಾರ ಕಿಟ್ ಗಳು ಅಗತ್ಯವಿದ್ದು, ಕುಟುಂಬ ಸದಸ್ಯರ ಸಂಖ್ಯೆಗೆ ಅನುಗುಣವಾಗಿ 5 ಕೆಜಿ ಹೆಚ್ಚುವರಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ನೀಡಲಾಗುವುದು ಎಂದು ಹೇಳಿದ್ದಾರೆ.
ಇದಕ್ಕಾಗಿ ಪ್ರತಿ ತಿಂಗಳು 466 ಕೋಟಿ ರೂಪಾಯಿ ವೆಚ್ಚವಾಗಬಹುದೆಂದು ಅಂದಾಜಿಸಲಾಗಿದೆ. ಆಹಾರ ಕಿಟ್ ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿದ ತೊಗರಿ ಬೆಳೆಯನ್ನು ಗರಿಷ್ಠ ಪ್ರಮಾಣದಲ್ಲಿ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಿಎಂ ಸೂಚನೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿ ಆಗಬಾರದು, ಅಳತೆಯಲ್ಲಿ ಹೆಚ್ಚು ಕಡಿಮೆಯಾಗದಂತೆ ಎಚ್ಚರಿಕೆ ವಹಿಸಬೇಕು, ಯಾವುದೇ ರೀತಿಯ ದೂರಿಗೆ ಅವಕಾಶ ನೀಡದಂತೆ ಪಾರದರ್ಶಕವಾಗಿ ಯೋಜನೆ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ನ್ಯಾಯಬೆಲೆ ಅಂಗಡಿಯಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ತಂತ್ರಾಂಶ ಅಳವಡಿಸಿ ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಆಹಾರ ಕಿಟ್ ವಿತರಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ತಿಂಗಳ 10ನೇ ತಾರೀಖಿನ ಒಳಗಾಗಿ ಗೋದಾಮು, ಸಗಟು ಮಳಿಗೆಗಳ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಕಿಟ್ ಗಳನ್ನು ವಿತರಿಸಬೇಕು ಎಂದು ಹೇಳಿದ್ದಾರೆ.
ಸಭೆಯಲ್ಲಿ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಫರ್ವೇಜ್ ಮೊದಲಾದವರು ಇದ್ದರು.
