ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ದೀಪಾವಳಿ ಗಿಫ್ಟ್ ನೀಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆ (ಡಿಎ) ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.
2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನವನ್ನು ಪಡೆಯುತ್ತಿರುವ ಸರ್ಕಾರಿ ನೌಕರರಿಗೆ ಜುಲೈ 1, 2026 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರವನ್ನು ಪ್ರಸ್ತುತ ಮೂಲವೇತನದ ಶೇ 15.75 ರಿಂದ ಶೇ 18ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರ ನಿರ್ಧಾರ ಮಾಡಿದೆ.
ಆದೇಶದಲ್ಲಿನ ವಿವರ:
2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ ಎಂದು ಉಲ್ಲೇಖಿಸಲಾಗಿದೆ. ಅಲ್ಲದೆ, 2024ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನವೂ ಇದರಲ್ಲಿ ಒಳಗೊಳ್ಳುತ್ತದೆ.
ವೇತನ ಶ್ರೇಣಿಯ ಗರಿಷಕ್ಕಿಂತ ಹೆಚ್ಚಾಗಿ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಇದರಲ್ಲಿ ಸೇರುತ್ತವೆ. ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಮೂಲವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಜುಲೈ 1, 2026 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇ.15.75 ರಿಂದ ಶೇ.18 ಕ್ಕೆ ಹೆಚ್ಚಿಸಿ ಮಂಜೂರು ಮಾಡಲಾಗಿದೆ.
ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಕ.ನಾ.ಸೇ(ಪ.ವೇ) ನಿಯಮಗಳು, 2024ರ ನಿಯಮ 3ರಲ್ಲಿ ಸೂಚಿಸಿರುವ ಮತ್ತು ಸದರಿ ನಿಯಮದಡಿ ಹೊರಡಿಸಿರುವ ಆದೇಶಗಳಲ್ಲಿ ಸೂಚಿಸಿರುವ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನವನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ ಎಂದು ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.
ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ನಿವೃತ್ತರಾದ ನೌಕರರು ರಾಜ್ಯ ಪಿಂಚಣಿದಾರರಾಗುವುದರಿಂದ ಅವರಿಗೂ ಸಹ ಈ ಆದೇಶ ಅನ್ವಯ
ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.
ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್ಜೆಪಿಸಿ ವೇತನ ಶ್ರೇಣಿಗಳ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

