ಬೆಂಗಳೂರು: ಏಷ್ಯನ್ ಗೇಮ್ಸ್-2026ರಲ್ಲಿ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿಗಳು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ ಅವರು ವಿಧಾನಸೌಧದಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಏಷ್ಯನ್ ಗೇಮ್ಸ್ನಲ್ಲಿ ರಾಜ್ಯದ ಕ್ರೀಡಾಪಟುಗಳು ತೋರಿದ ಸಾಧನೆಯನ್ನು ಗೌರವಿಸುವುದರ ಜೊತೆಗೆ, ಕರ್ನಾಟಕದ ಕ್ರೀಡಾ ಪ್ರತಿಭೆಗಳಿಗೆ ಹೆಚ್ಚಿನ ಆರ್ಥಿಕ ಪ್ರೋತ್ಸಾಹ, ಉದ್ಯೋಗ ಭದ್ರತೆ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ಅಗತ್ಯ ನೆರವು ಕಲ್ಪಿಸುವ ಉದ್ದೇಶದಿಂದ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.
ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನೀಡಲಾಗುತ್ತಿದ್ದ ನಗದು ಪುರಸ್ಕಾರದ ಮೊತ್ತವನ್ನು ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ಹಿಂದೆ ಚಿನ್ನದ ಪದಕ ವಿಜೇತರಿಗೆ ₹35 ಲಕ್ಷ, ಬೆಳ್ಳಿ ಪದಕ ವಿಜೇತರಿಗೆ ₹25 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ ₹15 ಲಕ್ಷ ನಗದು ಪುರಸ್ಕಾರ ನೀಡಲಾಗುತ್ತಿತ್ತು. ಪರಿಷ್ಕೃತ ಮೊತ್ತದ ಪ್ರಕಾರ, ಚಿನ್ನದ ಪದಕ ವಿಜೇತರಿಗೆ ₹1 ಕೋಟಿ, ಬೆಳ್ಳಿ ಪದಕ ವಿಜೇತರಿಗೆ ₹75 ಲಕ್ಷ ಮತ್ತು ಕಂಚಿನ ಪದಕ ಗೆದ್ದರೆ ₹50 ಲಕ್ಷ ನಗದು ಪುರಸ್ಕಾರ ನೀಡಲಾಗುವುದು.
ಈ ಬಾರಿ ಎಂಟು ಮಂದಿಗೆ ಈ ನಗದು ಪುರಸ್ಕಾರ ಸಿಗಲಿದ್ದು, ಜೊತೆಗೆ ಈ ಎಂಟು ಪದಕ ವಿಜೇತರಿಗೆ ಏಷ್ಯನ್ ಗೇಮ್ಸ್-2026ರಲ್ಲಿ ಭಾಗವಹಿಸಿದ್ದಕ್ಕಾಗಿ, ಪದಕ ಸಾಧನೆಗೆ ನೀಡಲಾಗುವ ನಗದು ಪುರಸ್ಕಾರದ ಹೆಚ್ಚುವರಿಯಾಗಿ ತಲಾ ₹5 ಲಕ್ಷ ಪ್ರೋತ್ಸಾಹಧನ ನೀಡಲಾಗುವುದು.
ಕ್ರೀಡಾಪಟುಗಳ ಸಾಧನೆಗೆ ತಕ್ಕ ಗೌರವ ನೀಡುವ ಹಾಗೂ ಮುಂದಿನ ಕ್ರೀಡಾಪಟುಗಳಿಗೆ ಇನ್ನಷ್ಟು ಪ್ರೇರಣೆ ನೀಡುವ ಉದ್ದೇಶದಿಂದ ನಗದು ಪುರಸ್ಕಾರದ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಡಾ.ಜಿ.ಪರಮೇಶ್ವರ ತಿಳಿಸಿದರು.
ಏಷ್ಯನ್ ಗೇಮ್ಸ್-2026ರಲ್ಲಿ ಭಾಗವಹಿಸಲು ಅರ್ಹತೆ ಪಡೆದು ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದ ಕರ್ನಾಟಕದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ ₹5 ಲಕ್ಷ ನಗದು ಪ್ರೋತ್ಸಾಹಧನ ಮಂಜೂರು ಮಾಡಲಾಗಿದೆ.
ರಾಜ್ಯದ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಅರ್ಹತೆ ಪಡೆಯುವುದೇ ಮಹತ್ವದ ಸಾಧನೆಯಾಗಿದ್ದು, ಪದಕ ಗಳಿಸಿದವರ ಜೊತೆಗೆ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಎಲ್ಲ ಕ್ರೀಡಾಪಟುಗಳನ್ನೂ ಪ್ರೋತ್ಸಾಹಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರದ ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಅರ್ಹ ಹಾಗೂ ಆಸಕ್ತ ಪದಕ ವಿಜೇತ ಕ್ರೀಡಾಪಟುಗಳನ್ನು ರಾಜ್ಯದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ನೇರ ನೇಮಕಾತಿ ಮಾಡಲು ಅವಕಾಶ ನೀಡಲಾಗಿದೆ.
ಕ್ರೀಡಾ ಕ್ಷೇತ್ರದಲ್ಲಿ ರಾಜ್ಯಕ್ಕೆ ಹಾಗೂ ದೇಶಕ್ಕೆ ಕೀರ್ತಿ ತರುವ ಸಾಧಕರಿಗೆ ಸರ್ಕಾರಿ ಸೇವೆಯಲ್ಲಿ ಅವಕಾಶ ನೀಡುವ ಮೂಲಕ ಅವರ ಭವಿಷ್ಯಕ್ಕೆ ಭದ್ರತೆ ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.
‘ಒಲಿಂಪಿಕ್ಸ್ನಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭಾಗವಹಿಸುವಿಕೆ ಮತ್ತು ಸಾಧನೆಯನ್ನು ಹೆಚ್ಚಿಸುವ ಉದ್ದೇಶದಿಂದ ಜಾರಿಗೊಳಿಸಿರುವ ‘ಗುರಿ: ಒಲಿಂಪಿಕ್ಸ್’ ಯೋಜನೆಯಡಿ 2026-27ನೇ ಸಾಲಿಗೆ ಏಷ್ಯನ್ ಗೇಮ್ಸ್ ಹಾಗೂ ಕಾಮನ್ವೆಲ್ತ್ ಗೇಮ್ಸ್ ಪದಕ ವಿಜೇತರ ಪೈಕಿ ಆಯ್ದ ನಾಲ್ವರು ಕ್ರೀಡಾಪಟುಗಳನ್ನು (ಎಂ.ಆರ್.ಪೂವಮ್ಮ, ಸ್ನೇಹಾ ಎಸ್.ಎಸ್., ಶ್ರೇಯಾಂಕ ಪಾಟೀಲ್, ಶಿಲ್ಪಾ ಕೆ.ಎಸ್) ಸೇರ್ಪಡೆ ಮಾಡಲಾಗಿದೆ.
ಈ ಕ್ರೀಡಾಪಟುಗಳಿಗೆ ಒಲಿಂಪಿಕ್ಸ್ ಸಿದ್ಧತೆ, ತರಬೇತಿ ಹಾಗೂ ಇತರೆ ಅಗತ್ಯಗಳಿಗೆ ಪ್ರಸಕ್ತ ಸಾಲಿನಲ್ಲಿ ತಲಾ ₹10 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗುವುದು.
ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ಹಾಗೂ ಅಗತ್ಯ ಆರ್ಥಿಕ ನೆರವು ಒದಗಿಸುವ ಮೂಲಕ ಒಲಿಂಪಿಕ್ಸ್ ಸೇರಿದಂತೆ ಜಾಗತಿಕ ಕ್ರೀಡಾಕೂಟಗಳಲ್ಲಿ ಹೆಚ್ಚಿನ ಪದಕಗಳನ್ನು ಗೆಲ್ಲುವಂತೆ ಸಜ್ಜುಗೊಳಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಸಾಧಕ ಕ್ರೀಡಾಪಟುಗಳ ಭವಿಷ್ಯಕ್ಕೆ ಉದ್ಯೋಗ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೇರ ನೇಮಕಾತಿಗಳಲ್ಲಿ ಕ್ರೀಡಾಪಟುಗಳಿಗೆ 2% ಮೀಸಲಾತಿ ನೀಡಲಾಗಿದೆ.
ಈ ಕುರಿತು 03-10-2026ರಂದು ಅಧಿಸೂಚನೆ ಹೊರಡಿಸಲಾಗಿದ್ದು, ರಾಜ್ಯ ಸರ್ಕಾರದ ಎಲ್ಲ ಹಂತದ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳ ನೇರ ನೇಮಕಾತಿಯಲ್ಲಿ ಸಾಧಕ ಕ್ರೀಡಾಪಟುಗಳಿಗೆ 2% ಮೀಸಲಾತಿ ಕಲ್ಪಿಸಲಾಗಿದೆ.
ಕ್ರೀಡಾಪಟುಗಳು ತಮ್ಮ ಸಾಧನೆಯ ನಂತರ ಉದ್ಯೋಗದ ಬಗ್ಗೆ ಆತಂಕಪಡಬೇಕಾದ ಪರಿಸ್ಥಿತಿ ಇರಬಾರದು. ಕ್ರೀಡಾ ಸಾಧನೆಗೆ ಗೌರವ ನೀಡುವುದರ ಜೊತೆಗೆ ಅವರ ಮುಂದಿನ ಬದುಕಿಗೂ ಭದ್ರತೆ ನೀಡಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಡಾ. ಜಿ. ಪರಮೇಶ್ವರ ತಿಳಿಸಿದರು.
ಕ್ರೀಡಾ ಕ್ಷೇತ್ರದಲ್ಲಿ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಆರ್ಥಿಕ ನೆರವು, ಉತ್ತಮ ತರಬೇತಿ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಸಿದ್ಧತೆ ಹಾಗೂ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ಕರ್ನಾಟಕವನ್ನು ದೇಶದ ಪ್ರಮುಖ ಕ್ರೀಡಾ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

