ಬೆಂಗಳೂರು: ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಶಾಲಾ ಕಟ್ಟಡದ ಸುರಕ್ಷತೆಯ ಪ್ರಮಾಣ ಪತ್ರ ನಕ್ಷೆ ಅನುಮೋದನೆ, ಅಗ್ನಿ ಸುರಕ್ಷತಾ ಪ್ರಮಾಣ ಪತ್ರ ಕಡ್ಡಾಯಗೊಳಿಸಿದ್ದ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ವಿಭಾಗೀಯ ಪೀಠ ನಿರಾಕರಿಸಿದೆ.
ಅನುದಾನ ರಹಿತ ಮಾನ್ಯತೆ ಪಡೆದ ಶಾಲೆಗಳ ಸಂಘದ ಅಧೀನದಲ್ಲಿ ಎಷ್ಟು ಶಾಲೆಗಳಿಗೆ ಏಕಸದಸ್ಯ ಪೀಠದ ಆದೇಶ ಜಾರಿ ಮಾಡಲಾಗುವುದಿಲ್ಲ ಎನ್ನುವ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಲು ನಿರ್ದೇಶನ ನೀಡಿದೆ.
ಹೈಕೋರ್ಟ್ ಏಕಸದಸ್ಯ ಪೀಠದ ಕ್ರಮವನ್ನು ಪ್ರಶ್ನಿಸಿ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಘದ ಕಾರ್ಯದರ್ಶಿ ಪ್ರಭಾಕರ್ ಅರಸ್ ಹಾಗೂ ಇತರರು ಸಲ್ಲಿಸಿರುವ ಮೇಲ್ಮನವಿ ಬಗ್ಗೆ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ಪೀಠ ವಿಚಾರಣೆ ನಡೆಸಿತು.
ಸುಪ್ರೀಂ ಕೋರ್ಟ್ ಆದೇಶದಂತೆ ಶಾಲೆಗಳ ಮಾನ್ಯತೆ ನವೀಕರಣ ಮಾಡಲು ಅಗ್ನಿ ಸುರಕ್ಷತಾ ಕ್ರಮ ಕೈಗೊಂಡ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ಪ್ರಮಾಣ ಪತ್ರ ಪಡೆದುಕೊಂಡಿರಬೇಕು. ಕರ್ನಾಟಕ ಅಗ್ನಿಶಾಮಕ ಇಲಾಖೆ ನಿಗದಿಪಡಿಸಿದ ಕಟ್ಟಡಗಳ ಸುರಕ್ಷತೆ ಮಾರ್ಗಸೂಚಿಗಳಡಿ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ ಹೊಂದಿರಬೇಕು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಶಾಲೆಗಳ ಮಾನ್ಯತೆ ನವೀಕರಣದ ಸಂದರ್ಭದಲ್ಲಿ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯವಾಗಿದ್ದು, ಇದು ಕರ್ನಾಟಕ ಶಿಕ್ಷಣ ಹಕ್ಕು ಕಾಯ್ದೆಯ ಸೆಕ್ಷನ್ 145ಕ್ಕೆ ವಿರುದ್ಧವಾಗಿದೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ಅನೇಕ ವರ್ಷಗಳಿಂದ ಶಾಲೆಗಳು ನಡೆಯುತ್ತಿವೆ ಎಂದ ಮಾತ್ರಕ್ಕೆ ಆ ಶಾಲೆಗಳಲ್ಲಿನ ಮಕ್ಕಳಿಗೆ ಸುರಕ್ಷತೆ ಕಲ್ಪಿಸುವುದು ಬೇಡ ಎನ್ನಲಾಗುವುದೇ ಎಂದು ಪ್ರಶ್ನಿಸಿದೆ. ಯಾವ ಕಟ್ಟಡದಲ್ಲಿ ಸರ್ಕಾರದ ಸುತ್ತೋಲೆ ಮತ್ತು ಏಕಸದಸ್ಯ ಪೀಠದ ಆದೇಶ ಜಾರಿ ಮಾಡಲಾಗುವುದಿಲ್ಲ ಎನ್ನುವ ವಿವರವನ್ನು ಸಂಘದ ಸದಸ್ಯರ ಸಹಿ ಹೊಂದಿರುವ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಅರ್ಜಿದಾರರ ಪರ ವಕೀಲರಿಗೆ ಸೂಚನೆ ನೀಡಿ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಲಾಗಿದೆ.
