ಬೆಂಗಳೂರು: ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಇ-ಸ್ವತ್ತು 2.0 ತಂತ್ರಾಂಶಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಇದೊಂದು ಐತಿಹಾಸಿಕ ಕಾರ್ಯಕ್ರಮ. ಶುಭ ಗಳಿಗೆಯಲ್ಲಿ ನಾವು ಸೇರಿದ್ದೇವೆ. ನಮ್ಮ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಂಡಿದ್ದು, ನಾವು ಭೂಮಿ ಮೇಲೆ ಹುಟ್ಟಿ, ಸತ್ತ ನಂತರ ಭೂಮಿಯ ಒಳಗೆ ಸೇರುತ್ತೇವೆ. ಆದರೆ ಬದುಕಿದ್ದಾಗ ನಾವು ಮಾಡಿದ ಸಾಧನೆ ಮಾತ್ರ ಭೂಮಿಯ ಮೇಲೆ ಉಳಿದುಕೊಳ್ಳುತ್ತದೆ. ಈ ಹಸ್ತ ನಿಮ್ಮ ಹಿತಕ್ಕಾಗಿ ಕೆಲಸ ಮಾಡುತ್ತಿದೆ. ಗಾಂಧೀಜಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿ ನೂರು ವರ್ಷಗಳು ತುಂಬಿದೆ. ಅಂದು ಗಾಂಧೀಜಿ ಅವರು ವಹಿಸಿಕೊಂಡ ಜವಾಬ್ದಾರಿ ಸ್ಥಾನದಲ್ಲಿ ಇಂದು ನಮ್ಮದೇ ರಾಜ್ಯದವರಾದ ಮಲ್ಲಿಕಾರ್ಜುನ ಖರ್ಗೆ ಅವರಿದ್ದಾರೆ ಎಂದರು.
ಭಾರತದ ಭವಿಷ್ಯ ಅಡಗಿರುವುದು ಹಳ್ಳಿಯಲ್ಲಿ ಎಂದು ಗಾಂಧೀಜಿ ತಿಳಿಸಿದ್ದರು. ಪ್ರತಿ ಹಳ್ಳಿಯಲ್ಲಿ ಪಂಚಾಯ್ತಿ, ಸೊಸೈಟಿ, ಶಾಲೆ ಇರಬೇಕು ಎಂದು ಮಾರ್ಗದರ್ಶನ ನೀಡಿದರು. ಅವರ ಮಾರ್ಗದರ್ಶನದಂತೆ ನಾವು ಕೆಲಸ ಮಾಡುತ್ತಿದ್ದೇವೆ. ನಿಮ್ಮ ಮನೆ ಬಾಗಿಲಿಗೆ ಇ-ಸ್ವತ್ತು ತಂದುಕೊಡುವ ಕೆಲಸ ಮಾಡುತ್ತಿದ್ದೇವೆ. ಇದು ನಿಮ್ಮೆಲ್ಲರ ಬದುಕಿಗೆ ಹೊಸರೂಪ ನೀಡಿ, ಎಲ್ಲ ಪಂಚಾಯ್ತಿ ಆಸ್ತಿ ದಾಖಲೆಗಳಿಗೆ 11 ಬಿ ಖಾತೆಗಳನ್ನು ನೀಡಲಾಗುತ್ತಿದೆ. ನೀವು ಅರ್ಜಿ ಹಾಕಿ 15 ದಿನದ ಒಳಗೆ ಖಾತೆ ನೀಡಲು ಸರ್ಕಾರ ತೀರ್ಮಾನಿಸಿದೆ. ಯಾರೂ ಕಚೇರಿ ಅಲೆಯುವುದು ಬೇಡ ಎಂದು ಆನ್ಲೈನ್ ಹಾಗೂ ಬಾಪುಜಿ ಕೇಂದ್ರಗಳಲ್ಲಿ ವಿತರಣೆಗೆ ಅವಕಾಶ ನೀಡಲಾಗಿದೆ. 11 ಬಿ ಮೂಲಕ ತೆರಿಗೆ ಪಾವತಿಸಿ, ಆಸ್ತಿ ದಾಖಲೆ ಸರಿಪಡಿಸಿಕೊಳ್ಳಿ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಉಳುವವನಿಗೆ ಭೂಮಿ, ಬಗರ್ ಹುಕುಂ ಸಾಗುವಳಿ ಜಮೀನು ಸಕ್ರಮ ಮಾಡಿದೆ. ಅರಣ್ಯ ಪ್ರದೇಶದಲ್ಲೂ ವಾಸಿಸುವವರಿಗೆ ಕಾನೂನಿನ ಅಡಿಯಲ್ಲಿ ಸಹಾಯ ಮಾಡಿದೆ. ನಿಮ್ಮ ಭೂಮಿ ಹಾಗೂ ಆಸ್ತಿ ದಾಖಲೆ ಸರಿಪಡಿಸುವುದು ನಮ್ಮ ಆರನೇ ಗ್ಯಾರಂಟಿ ಯೋಜನೆಯಾಗಿದೆ. ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳನ್ನು ಇ ಖಾತಾ ಅಭಿಯಾನ ಮಾಡಿದ್ದು, 6 ಲಕ್ಷ ಜನರಿಗೆ ಇ ಖಾತಾ ವಿತರಿಸಲಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಕೃಷ್ಣ ಬೈರೇಗೌಡರು ಹಾಗೂ ಪ್ರಿಯಾಂಕ್ ಖರ್ಗೆ ಅವರು ಸೇರಿ 1,11,111 ಜನರಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಿಂದ ಹೊರಗಿರುವ ತಾಂಡಾಗಳನ್ನು ಸಕ್ರಮ ಮಾಡಿ ಹಕ್ಕುಪತ್ರ, ಭೂ ದಾಖಲೆಗಳನ್ನು ವಿತರಿಸಿದ್ದೇವೆ ಎಂದು ವಿವರಿಸಿದರು.
