HomeKarnatakaಡಿಕೆಶಿ, ಜಾರ್ಜ್, ಸತೀಶ್ ಜಾರಕಿಹೊಳಿ: ಏನಾಗ್ತಿದೆ ಕರ್ನಾಟಕ ಕಾಂಗ್ರೆಸ್‌ನಲ್ಲಿ!

ಡಿಕೆಶಿ, ಜಾರ್ಜ್, ಸತೀಶ್ ಜಾರಕಿಹೊಳಿ: ಏನಾಗ್ತಿದೆ ಕರ್ನಾಟಕ ಕಾಂಗ್ರೆಸ್‌ನಲ್ಲಿ!

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿದ್ದಾರೆ. ಇಂಧನ ಸಚಿವ ಕೆ.ಜೆ.ಜಾರ್ಜ್ ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಎರಡು ದಿನದ ದೆಹಲಿ ಪ್ರವಾಸಕ್ಕೆ ತಯಾರಿ ನಡೆಸಿದ್ದಾರೆ.

2025ರ ನವೆಂಬರ್ 20ರ ಸುಮಾರಿಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಆರಂಭವಾದ ನಾಯಕತ್ವ ಬದಲಾವಣೆ ಚರ್ಚೆಗೆ ಅಂತಿಮ ತೆರೆ ಬಿದ್ದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬೇಕ್ ಫಾಸ್ಟ್‌ ಮೀಟಿಂಗ್ ಮಾಡಿದರೂ ಸಮಸ್ಯೆ ಬಗೆಹರಿದಿಲ್ಲ.

ನವೆಂಬರ್ ಕ್ರಾಂತಿ, ಸಂಕ್ರಾಂತಿ ಎಲ್ಲಾ ಕ್ರಾಂತಿಗಳು ಮುಗಿದರೂ ಕಾಂಗ್ರೆಸ್ ನಾಯಕರ ಬಣ ರಾಜಕೀಯ ನಿಂತಿಲ್ಲ. ಮಾರ್ಚ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲು ತಯಾರಿ ಮಾಡುತ್ತಿದ್ದಾರೆ. ಆದರೆ, ನಾಯಕತ್ವ ಬದಲಾವಣೆ ಚರ್ಚೆಯ ಬಿಸಿ ಆರಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೆಹಲಿ ಅಂಗಳಕ್ಕೆ ರಾಜಕೀಯ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೈಸೂರಿಗೆ ಬಂದು ಹೋದ ಬಳಿಕ ರಾಜ್ಯ ರಾಜಕೀಯದ ಚೆಂಡು ದೆಹಲಿ ಅಂಗಳಕ್ಕೆ ತಲುಪಿದೆ. ಸಿದ್ದರಾಮಯ್ಯ ಬಜೆಟ್ ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆಗೆ ಮುಂದಾಗಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಅವರ ಬಣದ ಶಾಸಕರು ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ತೊಡಗಿದ್ದಾರೆ. ಸಿದ್ದರಾಮಯ್ಯ ಆಪ್ತರಾದ ಸಚಿವ ಕೆ.ಜೆ.ಜಾರ್ಜ್ ದೆಹಲಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭೇಟಿ ಮಾಡಿದ್ದಾರೆ.

ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ರಾಹುಲ್ ಗಾಂಧಿ ಜೊತೆ ಸಭೆ ನಡೆಸಿದ್ದಾರೆ. ಆದರೆ ಈ ಸಭೆ ಅಸ್ಸಾಂ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ್ದು ಎಂದು ಡಿ.ಕೆ.ಶಿವಕುಮಾರ್ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ವಿದೇಶ ಪ್ರವಾಸದಲ್ಲಿದ್ದರು. ಅವರು ಬೆಂಗಳೂರು ನಗರಕ್ಕೆ ಮರಳಿದ್ದು, ಸತೀಶ್‌ ಜಾರಕಿಹೊಳಿ ಮತ್ತು ಡಾ. ಎಚ್.ಸಿ.ಮಹದೇವಪ್ಪ ಭೇಟಿಯಾಗಿ ಮಹತ್ವದ ಸಭೆ ನಡೆಸಿದ್ದಾರೆ.

ಡಿ.ಕೆ.ಶಿವಕುಮಾರ್ ದೆಹಲಿ ವಿಮಾನ ಏರುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು 5 ವರ್ಷ ಮುಖ್ಯಮಂತ್ರಿಯಾಗಿರಬೇಕು. ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆಯಾಗಬಾರದು ಎಂದು ವಾದಿಸುತ್ತಿರುವ ಮಹದೇವಪ್ಪ, ಸತೀಶ್ ಜಾರಕಿಹೊಳಿ ಮಹತ್ವದ ಸಭೆ ನಡೆಸಿದ್ದಾರೆ.

ಮೈಸೂರಿನಲ್ಲಿ ರಾಹುಲ್ ಗಾಂಧಿ ಭೇಟಿ ಬಳಿಕ ಮಾತನಾಡಿದ್ದ ಸಿದ್ದರಾಮಯ್ಯ, “ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು, ಮಾರ್ಗ ಮಧ್ಯೆ ಭೇಟಿ ಮಾಡಿದ್ದೇನೆ. ಈ ಸಂದರ್ಭದಲ್ಲಿ ಅವರ ಜೊತೆ ಯಾವುದೇ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿಲ್ಲ. ಸಂಜೆ ಅವರು ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು” ಎಂದು ಹೇಳಿದ್ದರು.

“ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ. ಶಾಸಕರಿಗೆ ಈ ಕುರಿತು ಮಾಹಿತಿ ಇರುವುದಿಲ್ಲ. ಈ ವಿಚಾರದಲ್ಲಿ ನಾನು ಅಥವಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಬೇಕು” ಎಂದು ತಿಳಿಸಿದ್ದರು.

“ಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು. ಈ ವಿಚಾರದಲ್ಲಿ ನಮ್ಮ ಪಕ್ಷದ ಶಾಸಕರಿಗಿಂತ ಮಾಧ್ಯಮಗಳು ಹೆಚ್ಚು ಆಸಕ್ತಿ ತೋರುತ್ತಿವೆ” ಎಂದು ದೂರಿದ್ದರು.

ರಾಹುಲ್ ಗಾಂಧಿ ಜನವರಿ 22ರ ಬಳಿಕ ವಿದೇಶ ಪ್ರವಾಸ ಕೈಗೊಳ್ಳಲಿದ್ದು, 27ರ ಬಳಿಕ ದೆಹಲಿಗೆ ವಾಪಸ್ ಆಗಲಿದ್ದಾರೆ. ಅಷ್ಟರೊಳಗೆ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಈಗ ಸತೀಶ್ ಜಾರಕಿಹೊಳಿ ಮುಂದಾಗಿದ್ದು, ಕಾಂಗ್ರೆಸ್ ಬಣ ರಾಜಕೀಯದ ಚಟುವಟಿಕೆ ಜೋರಾದ ಸೂಚನೆ ನೀಡಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular