ಮಂಗಳೂರು: ಸ್ನೇಹಿತರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದ ವೇಳೆ ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪಜಿರಡ್ಕದ ಬಳಿ ಈ ದುರಂತ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ (21) ಮೃತ ವಿದ್ಯಾರ್ಥಿ. ಉಜಿರೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು.
ಶ್ರೀಪೂರ್ಣ, ಏಳು ಜನ ಸ್ನೇಹಿತರೊಂದಿಗೆ ನೇತ್ರಾವತಿ ನದಿಗೆ ಈಜಾಡಲು ತೆರಳಿದ್ದರು. ಈ ವೇಳೆ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ.
ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

