ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ಬಂಧನದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಅವರನ್ನು ಮತ್ತೆ ಸಿಸಿಬಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ಆರೋಪಿಗಳಾದ ನಟಿಯರಾದ ರಾಗಿಣಿ, ಸಂಜನಾ, ವಿರೇನ್ ಖನ್ನಾ, ರಾಹುಲ್, ಪ್ರಶಾಂತ್ ರಂಕ, ಲೂಮ್ ಪೆಪ್ಪರ್, ಸೇರಿದಂತೆ ಎಲ್ಲಾ ಆರೋಪಿಗಳನ್ನು ಸಿಸಿಬಿ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
ಈ ವೇಳೆ ಇಬ್ಬರು ನಟಿಯರು ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ಡ್ರಗ್ಸ್ ದಂಧೆಯಲ್ಲಿ ಇಬ್ಬರು ನಟಿಯರು ಭಾಗಿಯಾಗಿದ್ದಾರೆ ಎಂಬ ಬಗ್ಗೆ ನಮಗೆ ಸಾಕಷ್ಟು ಮಾಹಿತಿ ಲಭ್ಯವಿದೆ. ಆದಾಗ್ಯೂ ತನಿಖೆಗೆ ಸಹಕರಿಸುತ್ತಿಲ್ಲ. ಹೀಗಾಗಿ ಆರೋಪಿಗಳನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ. ಹೀಗಾಗಿ 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ವಹಿಸುವಂತೆ ನ್ಯಾಯಾಧೀಶರ ಎದುರು ತನಿಖಾಧಿಕಾರಿಗಳು ಮನವಿ ಮಾಡಿದ್ದಾರೆ.
ಬಂಧಿತರಿಂದ ಏನನ್ನೂ ವಶಕ್ಕೆ ಪಡೆದುಕೊಳ್ಳಲಾಗಿಲ್ಲ. ಸಿಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತುಗಳು ಕೂಡ ಬಂಧಿತರ ಮನೆಯಲ್ಲಿ ಸಿಕ್ಕಿಲ್ಲ. ಯಾರೋ ಅವರ ವಿರುದ್ಧ ಆರೋಪ ಮಾಡಿದ್ದಾರೆ ಎಂಬ ಕಾರಣಕ್ಕೆ ಅವರನ್ನು ವಶಕ್ಕೆ ಪಡೆಯಲಾಗಿದೆ. ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷಿಗಳು ಆರೋಪಿಗಳ ವಿರುದ್ಧ ಸಿಕ್ಕಿಲ್ಲ. ಹೀಗಿರುವಾಗ ನಟಿ ರಾಗಿಣಿ ಹಾಗೂ ಸಂಜನಾ ಅವರನ್ನು ಮತ್ತೆ ಕಸ್ಟಡಿಗೆ ನೀಡುವ ಅಗತ್ಯವಿಲ್ಲ ಎಂದು ನಟಿಯರ ಪರ ವಕೀಲರು ವಾದ ಮಂಡಿಸಿದ್ದಾರೆ.
ವಾದ-ವಿವಾದ ಆಲಿಸಿದ ನ್ಯಾಯಾಲಯ ಇಬ್ಬರು ನಟಿಯರನ್ನು ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ನಟಿ ರಾಗಿಣಿ ಹಾಗೂ ಸಂಜನಾ ಅವರಿಗೆ ಮಹಿಳಾ ಸಾಂತ್ವನ ಕೇಂದ್ರದಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿದೆ.