
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರವನ್ನು ಥಿಯೇಟರ್ ನಲ್ಲಿ ಪೈರಸಿ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕನಕಪುರದ ಕಲ್ಲನಕುಪ್ಪೆ ನಿವಾಸಿ ಮಧು(28) ಬಂಧಿತ ಆರೋಪಿ ಎನ್ನಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ್ದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಜಪ್ತಿ ಮಾಡಲಾಗಿದೆ.
ಮಾರ್ಚ್ 11 ರಂದು ಬಿಡುಗಡೆಯಾಗಿದ್ದ ‘ರಾಬರ್ಟ್’ ಬೆಂಗಳೂರಿನ ಗಿರಿನಗರದಲ್ಲಿರುವ ಸಿದ್ಧೇಶ್ವರ ಚಿತ್ರಮಂದಿರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಬೆಳಗಿನ ಪ್ರದರ್ಶನಕ್ಕೆ ಸಿನಿಮಾ ವೀಕ್ಷಿಸಲು ಬರುತ್ತಿದ್ದ ಈತನ ಬಗ್ಗೆ ಚಿತ್ರಮಂದಿರದ ಸಿಬ್ಬಂದಿಯೊಬ್ಬರು ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಸಿನಿಮಾವನ್ನು ಸೆರೆ ಹಿಡಿಯುತ್ತಿರುವುದು ಗೊತ್ತಾಗಿದೆ.
ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಅವರ ಗಮನಕ್ಕೆ ಇದು ಬಂದಿದ್ದು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪುಟ್ಟೇನಹಳ್ಳಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.