ಚೆನ್ನೈ: ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಕೋಟ್ಯಾಂತರ ಅಭಿಮಾನಿಗಳಿಗೆ ಸಂತಸದ ಸುದ್ದಿ. ಎಸ್.ಪಿ.ಬಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಪುತ್ರ ಎಸ್.ಪಿ. ಚರಣ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಎಸ್.ಪಿ.ಬಿ. ಪುತ್ರ ಚರಣ್, ತಮ್ಮ ತಂದೆ ಬಾಲಸುಬ್ರಹ್ಮಣ್ಯಂ ವೈದ್ಯರು ನೀಡುತ್ತಿರುವ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ಸುಧಾರಣೆ ಕಂಡುಬಂದಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಹಾಗಾಗಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಶೀಘ್ರದಲ್ಲಿ ಚೇತರಿಸಿಕೊಂಡು ಬರುವ ವಿಶ್ವಾಸವಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಕಳೆದ 21 ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ನಿನ್ನೆ ಕೂಡ ಸಾಕಷ್ಟು ಏರುಪೇರುಗಳಾಗಿದ್ದವು. ಆದರೆ ಇದೀಗ ಅವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡುಬಂದಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.