ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಘಟನೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರನ್ನು ಬಳಸಿ ನಕಲಿ ಟಿಪ್ಪಣಿ (Fake Note) ಸೃಷ್ಟಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.
ಕಚೇರಿಯಿಂದ ಅಧಿಕೃತವಾಗಿ ಹೊರಡಿಸಲಾಗುವ ‘ಟಿಪ್ಪಣಿ’ಯನ್ನು ಕಿಡಿಗೇಡಿಗಳು ನಕಲು ಮಾಡಿದ್ದಾರೆ ಎನ್ನಲಾಗಿದೆ. ಸಿಎಂ ಅವರ ಸಹಿ ಮತ್ತು ಲೆಟರ್‌ಹೆಡ್ ಅನ್ನು ಫೋರ್ಜರಿ (Forgery) ಮಾಡುವ ಮೂಲಕ ಈ ನಕಲಿ ದಾಖಲೆಯನ್ನು ಸೃಷ್ಟಿಸಲಾಗಿದೆ.ಮಂಡ್ಯ ಜಿಲ್ಲೆಯ ಆರೋಗ್ಯ ಅಧಿಕಾರಿಯೊಬ್ಬರನ್ನು ಮೈಸೂರಿಗೆ ನಿಯೋಜಿಸುವ ನಕಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಸದರಿ ಟಿಪ್ಪಣಿಯು ಅಧಿಕೃತವಲ್ಲ, ಇ-ಆಫೀಸ್‌ನಲ್ಲಿ ನೋಂದಾಯಿಸಲ್ಪಟ್ಟಿಲ್ಲ ಮತ್ತು ಯಾವುದೇ ಇಲಾಖೆಗೆ ಕಳುಹಿಸಲಾಗಿಲ್ಲ. ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಈ ಕೃತ್ಯ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಟ್ವೀಟ್.!
ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ.
ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ. ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್ / ಎಐ ಯುಗದಲ್ಲಿ ವಾಟ್ಸ್‌ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

