ಬೆಂಗಳೂರು: ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆಯಿಂದ ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿದೆ. ಈ ನಡುವೆ ಕಾಳಸಂತೆಕೋರರು ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಿ ದುರ್ಲಾಭ ಪಡೆಯುತ್ತಿದ್ದು, ಇಂತಹ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಸಚಿವರು ಮತ್ತು ಶಾಸಕರುಗಳ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ಸಭೆಯ ನಡುವೆಯೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರವಾಣಿ ಮೂಲಕ ಮಾತನಾಡಿ ಸ್ಪಷ್ಟ ಸೂಚನೆ ನೀಡಿದ್ದಾರೆ.
ಜಿಲ್ಲೆ ಮತ್ತು ತಾಲ್ಲೂಕು, ಹೋಬಳಿ ಎಲ್ಲೂ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಠಿಯಾಗಬಾರದು. ಈ ರೀತಿ ಅಭಾವ ಸೃಷ್ಟಿಸುತ್ತಿರುವವರ ಬಗ್ಗೆ ತೀವ್ರ ನಿಗಾಇಡುವಂತೆ ಹಾಗೂ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.