ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ಥಳೀಯ ವೃಂದ ಮತ್ತು ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂದರ್ಭದಲ್ಲಿ ವಿವಿಧ ನೇಮಕಾತಿ ಪ್ರಾಧಿಕಾರಗಳು ಅನುಸರಿಸಬೇಕಾದ ಕ್ರಮಗಳ ಬಗ್ಗೆ 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶೆ ಕುರಿತು ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು.
ಉನ್ನತ ಶಿಕ್ಷಣ ಇಲಾಖೆ ಮೂಲಕ ಪ್ರಥಮ ದರ್ಜೆ ಕಾಲೇಜುಗಳ 310 ಹುದ್ದೆಗಳ ಆಯ್ಕೆ ಇತ್ತೀಚೆಗೆ ನಡೆದಿದ್ದು, ಆಯ್ಕೆ ಪ್ರಕ್ರಿಯೆಯಲ್ಲಿ ಲೋಪವಾಗಿದೆ ಎಂದು ಕೆಲವು ಅಭ್ಯರ್ಥಿಗಳು ದೂರು ನೀಡಿದ್ದಾರೆ. ಆಯ್ಕೆ ಪ್ರಕ್ರಿಯೆಯಲ್ಲಿ ಡಿಪಿಎಆರ್ ನೀಡಿರುವ ಸ್ಪಷ್ಟ ನಿರ್ದೇಶನಗಳನ್ನು ಪಾಲಿಸುವಲ್ಲಿ ಲೋಪವಾಗಿದೆ ಎಂಬುದನ್ನು ಮನಗಂಡು, ಆಯ್ಕೆ ಪಟ್ಟಿಯನ್ನು ಮರು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿರುವ ಸುತ್ತೋಲೆಗಳನ್ನು ಕಡ್ಡಾಯವಾಗಿ ಪಾಲಿಸಲು ಅಧಿಕಾರಿಗಳಿಗೆ ಸೂಚಿಸಿ, ತಪ್ಪಿದ್ದಲ್ಲಿ ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಗ್ ಖರ್ಗೆ, ಡಾ. ಶರಣ್ ಪ್ರಕಾಶ್ ಪಾಟೀಲ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

