ಬೆಂಗಳೂರು : ಬಾಕಿಯಿರುವ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಬ್ಯಾಕ್ಲಾಗ್ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ. ಸರ್ಕಾರ ದಲಿತರ ಪರವಾಗಿದ್ದು, ದಲಿತರಿಗೆ ಸೂಕ್ತ ನ್ಯಾಯ ಒದಗಿಸಲು ಅಡ್ಡಗಾಲು ಹಾಕುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ/ಪಂಗಡಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.
ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಾಲಯಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳ ಕುರಿತು ತೀರ್ಪು ಬಂದರೂ, ತೀರ್ಪು ಜಾರಿಗೆ ಯಾಕೆ ಬಾಕಿ ಇದೆ. ಪ್ರಸ್ತುತ ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಿದ್ದು, ಸಮಗ್ರ ವರದಿಯನ್ನು ಸಲ್ಲಿಸಬೇಕು ಎಂದರು.
ರಾಜ್ಯಾದ್ಯಂತ ದೇವದಾಸಿಯರ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ದೇವದಾಸಿಯರ ಪುನರ್ವಸತಿಗೆ ಹಾಗೂ ಈ ಪಿಡುಗನ್ನು ಸಂಪೂರ್ಣವಾಗಿ ತೊಲಗಿಸಲು ಯೋಜನೆ ಜಾರಿಗೊಳಿಸಲಾಗುವುದು. ವಿಶೇಷ ಅನುದಾನ ನೀಡುವ ಬಗ್ಗೆಯೂ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.