ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ದೋಷಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಅವರನ್ನು ಜೈಲಿಗೆ ಕರೆದೊಯ್ಯುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.
ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ನಂತರ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳನ್ನು ಬಿಎಂಟಿಸಿ ಬಸ್ ನಲ್ಲಿ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕರೆದುಕೊಂಡು ಹೋಗಿದ್ದಾರೆ. ಪರಪ್ಪನ ಅಗ್ರಹಾರ ಸಮೀಪ ಬಸ್ ನ ಕೆಳ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲರನ್ನು ಬಸ್ ನಿಂದ ಇಳಿಸಿ ಬೇರೆ ವಾಹನದಲ್ಲಿ ಕರೆದೊಯ್ಯಲಾಗಿದೆ.
ಆಯಿಲ್ ಸೋರಿಕೆಯಿಂದ ಬಸ್ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ರಸ್ತೆ ಬದಿ ಬಸ್ ನಿಲ್ಲಿಸಿದ್ದಾರೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಲಾಗಿದೆ.

