ಬೆಂಗಳೂರು: ನಕಲಿ ಪ್ರಮಾಣ ಪತ್ರ ಸೃಷ್ಟಿಸಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ವಂಚಿಸಿದ ಪ್ರಕರಣದಲ್ಲಿ ಶಿಕ್ಷಕ, ಇಬ್ಬರು ವೈದ್ಯರು ಸೇರಿದಂತೆ ಐವರನ್ನು ಬಂಧಿಸಲಾಗಿದೆ.
ವಿಶೇಷ ಚೇತನರ ಕೋಟಾದಡಿ ನಕಲಿ ಪ್ರಮಾಣ ಪತ್ರ ಸೃಷ್ಟಿಸಿ ವೈದ್ಯಕೀಯ ವಿದ್ಯಾರ್ಥಿಗಳಿಂದ ಲಕ್ಷಾಂತರ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೋಲೀಸರು 5 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖ್ಯ ಆಡಳಿತಾಧಿಕಾರಿ ಇಸ್ಲಾಉದ್ದೀನ್ ಗದ್ಯಾಳ್ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಪಿಗಳಾದ ಶಿಕ್ಷಕ ಭರಮಪ್ಪ, ವಿಜಯನಗರ ಜಿಲ್ಲೆ ಹೊಸಪೇಟೆ ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ. ಹರಿಪ್ರಸಾದ್, ಮಕ್ಕಳ ತಜ್ಞ ಡಾ. ಶ್ರೀನಿವಾಸ್ ಮತ್ತು ಕೊಪ್ಪಳದ ಕುಕನೂರು ತಾಲೂಕಿನ ಮಂಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಾಯಕ ಸುಧಾಕರ್ ಮತ್ತು ಎಫ್.ಡಿ.ಎ. ಉಮೇಶ ಚೌಧರಿ ಎಂಬವರನ್ನು ಬಂಧಿಸಲಾಗಿದೆ.
ಪ್ರಸಕ್ತ ಸಾಲಿನ ಯುಜಿ ಸಿಇಟಿ, ಯುಜಿ ನೀಟ್ ಗಳಲ್ಲಿ ಮೆಡಿಕಲ್ ಸೀಟು ಕೋರಿ 21 ಅಭ್ಯರ್ಥಿಗಳು ಶ್ರವಣದೋಷವಿದೆ ಎಂದು ವಿಶೇಷ ಚೇತನರ ಕೋಟಾದಡಿ ಪ್ರಮಾಣ ಪತ್ರ ಸಲ್ಲಿಸಿದ್ದರು. ಕೆಇಎ ವತಿಯಿಂದ ಇವುಗಳ ಪರಿಶೀಲನೆ ವೇಳೆ ನಕಲಿ ಎನ್ನುವುದು ಕಂಡು ಬಂದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿತ್ತು.
ಭರಮಪ್ಪ ಬೆಂಗಳೂರಿನ ಶಾಲೆಯೊಂದರಲ್ಲಿ ಶಿಕ್ಷಕನಾಗಿದ್ದು, ವಿಶೇಷ ಚೇತನರ ಕೋಟಾದಡಿ ವೈದ್ಯಕೀಯ ಸೀಟು ಕೊಡಿಸುವುದಾಗಿ ಅಭ್ಯರ್ಥಿಗಳನ್ನು ಸಂಪರ್ಕಿಸಿ ಅವರಿಂದ 5 ಲಕ್ಷ ಹಣ ಪಡೆಯುತ್ತಿದ್ದ. ನಂತರ ಇತರೆ ಆರೋಪಿಗಳೊಂದಿಗೆ ಸೇರಿಕೊಂಡು ನಕಲಿ ಪ್ರಮಾಣ ಪತ್ರ ಸೃಷ್ಟಿಸಿ ಇದೇ ರೀತಿ 21 ಅಭ್ಯರ್ಥಿಗಳಿಂದ ಹಣ ಪಡೆದು ನಕಲಿ ದಾಖಲಾತಿ ಸೃಷ್ಟಿಸಿದ್ದಾರೆ.
21 ಅಭ್ಯರ್ಥಿಗಳಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಪೊಲೀಸರು ಸೂಚನೆ ನೀಡಿದ್ದು, ಪರಿಶೀಲನೆಯ ಬಳಿಕ ಅವರನ್ನು ಬಂಧಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.