ಬೆಂಗಳೂರು: ಇದೇ ಮೊದಲ ಬಾರಿಗೆ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಶೇಕಡ 15ರಷ್ಟು ಕೋಟಾ ಸೀಟುಗಳನ್ನು ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2025- 26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶಿಸಿದೆ. ಹೊಸ 450 ಸೀಟುಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇಕಡ 15ರಷ್ಟು ಎನ್.ಆರ್.ಐ. ಕೋಟಾ ನಿಗದಿಪಡಿಸಲಾಗಿದೆ. ಇದಕ್ಕೆ 25 ಲಕ್ಷ ರೂ, ಶುಲ್ಕ ನಿಗದಿ ಮಾಡಲಾಗಿದೆ. ಇದರಿಂದ ಸರ್ಕಾರಿ ವೈದ್ಯಕೀಯ ಕಾಲೇಜು ಸಂಸ್ಥೆಗಳು ಸರ್ಕಾರದ ಅನುದಾನದ ಮೇಲೆ ಹೆಚ್ಚು ಅವಲಂಬನೆಯಾಗದೆ ಸ್ವಾವಲಂಬಿಯಾಗಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಬೆಂಗಳೂರು, ಮೈಸೂರು, ಬೆಳಗಾವಿ, ಚಿಕ್ಕಬಳ್ಳಾಪುರ, ಕಲಬುರಗಿ, ಹಾಸನ, ರಾಯಚೂರು, ವಿಜಯನಗರದಲ್ಲಿರುವ ಸರ್ಕಾರಿ ಮೆಡಿಕಲ್ ಕಾಲೇಜುಗಳಿಗೆ ಹೆಚ್ಚುವರಿಯಾಗಿ ತಲಾ 50 ಸೀಟು ಹಂಚಿಕೆಯಾಗಿದೆ.