ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ವೇಶ್ಯಾವಾಟಿಕೆಗೆ ಪ್ರಚೋದನೆ ನೀಡುತ್ತಿದ್ದ ಆರೋಪದ ಮೇಲೆ ಆರು ಮಂದಿ ವಿದೇಶಿ ಮಹಿಳೆಯರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಮಡಿವಾಳ ಚೆಕ್ ಪೋಸ್ಟ್ ಸಮೀಪ ಬಸ್ ನಿಲ್ದಾಣದ ಫುಟ್ಪಾತ್ ಬಳಿ ವಿದೇಶಿ ಮಹಿಳೆಯರು ನಿಂತುಕೊಂಡು ರಸ್ತೆಯಲ್ಲಿ ಓಡಾಡುವ ಪುರುಷರನ್ನು ವೇಶ್ಯಾವಾಟಿಕೆಗೆ ಪ್ರಚೋದಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸ್ ಮಹಿಳಾ ಸಂರಕ್ಷಣಾ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
ವಿದೇಶಿ ಮಹಿಳೆಯರು ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸಿಸಿಬಿ ಮಹಿಳಾ ಸಂರಕ್ಷಣಾ ದಳ ಮತ್ತು ಕೋರಮಂಗಲ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರು ಮಂದಿ ವಿದೇಶಿ ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಶಿಕ್ಷಣ, ಪ್ರವಾಸಿ ವೀಸಾ ದಡಿ ಇವರು ಭಾರತಕ್ಕೆ ಬಂದಿರುವ ಮಾಹಿತಿ ಗೊತ್ತಾಗಿದ್ದು, ತನಿಖೆ ಮುಂದುವರೆದಿದೆ ಎಂದು ಹೇಳಲಾಗಿದೆ.

