ಬೆಂಗಳೂರು: ಇಂದು ಇಸ್ರೋ ಮಾಜಿ ಅಧ್ಯಕ್ಷ ಡಾ. ಕಸ್ತೂರಿರಂಗನ್(84) ಅವರ ಅಂತ್ಯಕ್ರಿಯೆ ನಡೆಯಲಿದೆ. ಏಪ್ರಿಲ್ 25ರಂದು ಬೆಳಗ್ಗೆ 10:45 ರ ಸುಮಾರಿಗೆ ಡಾ. ಕಸ್ತೂರಿ ರಂಗನ್ ನಿಧನರಾಗಿದ್ದರು.
ಬೆಂಗಳೂರಿನ ಕೊಡಿಗೇಹಳ್ಳಿ ಗೇಟ್ ಬಳಿಯ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಅವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ರಾಮನ್ ಸಂಶೋಧನಾ ಸಂಸ್ಥೆ ಆವರಣದಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ವಿದೇಶದಿಂದ ಮಕ್ಕಳು ಬರಬೇಕಾಗಿದ್ದ ಹಿನ್ನೆಲೆಯಲ್ಲಿ ಮೃತದೇಹವನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಕಸ್ತೂರಿರಂಗನ್ ಪಾರ್ಥಿವ ಶರೀರ ಇರಿಸಲಾಗಿತ್ತು.
1994 ರಿಂದ 2003ರ ವರೆಗೆ ಕಸ್ತೂರಿ ರಂಗನ್ ಇಸ್ರೋ ಅಧ್ಯಕ್ಷರಾಗಿದ್ದರು. ಭಾರತೀಯ ಬಾಹ್ಯಾಕಾಶ ವಿಜ್ಞಾನಿಯಾಗಿದ್ದ ಕೃಷ್ಣಸ್ವಾಮಿ ಕಸ್ತೂರಿರಂಗನ್ ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು. ಸಕಲ ಸರ್ಕಾರಿ ಗೌರವದೊಂದಿಗೆ ಇಂದು ಅಂತ್ಯಕ್ರಿಯೆ ನೆರವೇರಿಸಲಾಗುವುದು.