ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಇದರ ಬೆನ್ನಲ್ಲೇ ಅನುತ್ತೀರ್ಣರಾದ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈಸೂರಿನ ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯಾ(17) ಕಲಾಮಂದಿರ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪಿಸಿಎಂಬಿ ಓದಿ ಪರೀಕ್ಷೆ ಬರೆದಿದ್ದ ಅವರು ರಸಾಯನ ಶಾಸ್ತ್ರ ವಿಷಯದಲ್ಲಿ ಅನುತ್ತೀರ್ಣರಾಗಿದ್ದರಿಂದ ಮನನೊಂದು ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಅಗಸನೂರು ಗ್ರಾಮದ ಮಲ್ಲಯ್ಯ- ನಾಗರತ್ನ ದಂಪತಿಯ ಪುತ್ರಿ ವಿಜಯಲಕ್ಷ್ಮಿ ಸಿರಗುಪ್ಪದ ವಿಕೆಜೆ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರದಲ್ಲಿ ಓದುತ್ತಿದ್ದು, ಸಮಾಜಶಾಸ್ತ್ರ ವಿಷಯದಲ್ಲಿ ಕೇವಲ 15 ಅಂಕ ಬಂದು ಫೇಲಾದ ಹಿನ್ನೆಲೆಯಲ್ಲಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಾವಣಗೆರೆ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೃಪಾ(18) ಎರಡು ವಿಷಯದಲ್ಲಿ ಫೇಲಾದ ವಿಷಯ ತಿಳಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದ ತಾಂಡಾದ ಕಾವ್ಯ ಬಸಪ್ಪ ಲಮಾಣಿ(18) ವಿಜ್ಞಾನ ವಿಭಾಗದಲ್ಲಿ 4 ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.