ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.
ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕನೊಬ್ಬನ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನ ಲಗೇಜ್ ಬ್ಯಾಗ್ ಅನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಬ್ಯಾಗ್ನಲ್ಲಿದ್ದ ಕ್ಯಾಂಡಿ ಪ್ಯಾಕೆಟ್ಗಳ (Candy Packets) ಒಳಗೆ ಅತಿ ಚಾಣಾಕ್ಷತನದಿಂದ ಮಾದಕ ವಸ್ತುವನ್ನು ಬಚ್ಚಿಟ್ಟಿರುವುದು ಪತ್ತೆಯಾಗಿದೆ.
ಒಟ್ಟು 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ (Hydroponic Weed) ವಶಪಡಿಸಿಕೊಳ್ಳಲಾಗಿದ್ದು, ಮಾರುಕಟ್ಟೆಯಲ್ಲಿ ಇದರ ಅಂದಾಜು ಬೆಲೆ ₹3.39 ಕೋಟಿ ಇದೆ ಎನ್ನಲಾಗಿದೆ.ಬ್ಯಾಂಕಾಕ್ನಿಂದ ಬಂದಿದ್ದ ಓರ್ವ ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಎನ್ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು, ಈ ಜಾಲದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತೀವ್ರ ತನಿಖೆ ಕೈಗೊಂಡಿದ್ದಾರೆ.

