ಅನಿಲ ಟ್ಯಾಂಕರೊಂದು ಕಟಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಪಲ್ಟಿಯಾಗಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಹೆಚ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿರುವ ಕಾರಣ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಉಡುಪಿ ಪೊಲೀಸರು ಆದೇಶಿಸಿದ್ದಾರೆ.
ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ರಾತ್ರಿ 8 ಗಂಟೆಯ ತನಕ ಈ ವಾಹನ ಸಂಚಾರ ಮಾರ್ಗ ಬದಲು ಆದೇಶ ಜಾರಿಯಲ್ಲಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಟಪಾಡಿ ಬಳಿ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂದುಸ್ತಾನ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆಗೆ ಬಿದ್ದಿದೆ.
ಟ್ಯಾಂಕರ್ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುರಕ್ಷತೆಗಾಗಿ ಸಂಚಾರವನ್ನು ಬದಲಾವಣೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪರ್ಯಾಯ ಮಾರ್ಗಗಳು
- ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ವಾಹನಗಳು. ಕಾಪುವಿನಿಂದ ಶಿರ್ವಾ ಮೂಡಬೆಳ್ಳೆ ಮಣಿಪುರ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ಹೋಗುವುದು.
- ಪಡುಬಿದ್ರೆ ಬೆಳ್ಮಣ್- ಶಿರ್ವ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ತಲುಪುವುದು.
- ಉಡುಪಿಯಿಂದ ಮಂಗಳೂರಿಗೆ ಹೋಗುವ ವಾಹನಗಳು. ಮಣಿಪಾಲದಿಂದ ಮಣಿಪುರ- ಮೂಡಬೆಳ್ಳಿ ಮಾರ್ಗವಾಗಿ ಶಿರ್ವ ಮಾರ್ಗವಾಗಿ ಕಾಪು ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ತೆರಳುವುದು.
- ಮಣಿಪಾಲದಿಂದ ಶಿರ್ವ-ಬೆಳ್ಮಣ್ ಮಾರ್ಗವಾಗಿ ಪಡುಬಿದ್ರೆ ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ಸಂಚರಿಸುವುದು.
- ಈ ಆದೇಶವು ತಕ್ಷಣದಿಂದ ಜಾರಿಗೆ ಬರುತ್ತದೆ ಹಾಗೂ ರಾತ್ರಿ ಎಂಟು ಗಂಟೆಯವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ.

