ಬಿಜೆಪಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ತಯಾರಿ ಆರಂಭಿಸಿದೆ. 5 ನಗರ ಪಾಲಿಕೆಗಳ, 369 ವಾರ್ಡ್‌ಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸಬೇಕು ಎಂದು ಈಗಾಗಲೇ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ಕರ್ನಾಟಕದ ಪ್ರತಿಪಕ್ಷವಾದ ಬಿಜೆಪಿ ಬೆಂಗಳೂರು ನಗರದ ಆಡಳಿತವನ್ನು ಹಿಡಿಯುವ ಉತ್ಸಾಹದಲ್ಲಿದೆ. ಆದ್ದರಿಂದ ಜಿಬಿಎ ಚುನಾವಣಾ ಉಸ್ತುವಾರಿಯಾಗಿ ರಾಮ್ ಮಾಧವ್ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ಚುನಾವಣಾ ಸಹ ಉಸ್ತುವಾರಿಗಳನ್ನು ಸಹ ನೇಮಿಸಿದೆ. ಸತೀಶ್ ಪೂನಿಯಾ, ಸಂಜಯ್ ಉಪಾಧ್ಯಾಯ ಅವರು ಸಹ ಉಸ್ತುವಾರಿಯಾಗಿದ್ದಾರೆ. ಜಿಬಿಎ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಸೀಟು ಹಂಚಿಕೆ ಮಾಡಿಕೊಳ್ಳುವ ಕುರಿತು ಇನ್ನೂ ಸಹ ಎರಡೂ ಪಕ್ಷಗಳು ಯಾವುದೇ ತೀರ್ಮಾನ ಕೈಗೊಂಡಿಲ್ಲ.
ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ: ಬೃಹನ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಜಯದ ಬಳಿಕ ಬೆಂಗಳೂರು ನಗರದಲ್ಲಿಯೂ ಜನರು ಬಿಜೆಪಿ ಬೆಂಬಲಿಸಲಿದ್ದಾರೆ ಎಂಬ ನಿರೀಕ್ಷೆಯಲ್ಲಿ ಬಿಜೆಪಿ ನಾಯಕರು ಇದ್ದಾರೆ.
ಮುಂಬೈ ಚುನಾವಣಾ ಫಲಿತಾಂಶದ ಬಳಿಕ ಟ್ವೀಟ್ ಮಾಡಿದ್ದ ವಿರೋಧ ಪಕ್ಷದ ನಾಯಕ ಆರ್.ಅಶೋಕ, ‘ಬಿಜೆಪಿಗೆ ಜೈ ಎಂದ ಮುಂಬೈ ಜನತೆ! ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ನಂತರ ಈಗ ಮಹಾರಾಷ್ಟ್ರದ ಪ್ರತಿಷ್ಠಿತ ಬಿಎಂಸಿ (BMC) ಸೇರಿದಂತೆ ಪುಣೆ, ನಾಗಪುರ ಹಾಗೂ ರಾಜ್ಯದ ಎಲ್ಲಾ ಪ್ರಮುಖ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ (ಏಕನಾಥ್ ಶಿಂಧೆ ಬಣ) ಮೈತ್ರಿಕೂಟ ಮತ್ತೊಮ್ಮೆ ಅಭೂತಪೂರ್ವ ಜಯಭೇರಿ ಬಾರಿಸಿದ್ದು ಇದು ಜನತೆ ಮತ್ತೊಮ್ಮೆ ಬಿಜೆಪಿಯ ಅಭಿವೃದ್ಧಿ ರಾಜಕಾರಣಕ್ಕೆ ಮನ್ನಣೆ ನೀಡಿದ್ದಾರೆ’ ಎಂದು ಹೇಳಿದ್ದರು.
‘ಈ ಐತಿಹಾಸಿಕ ವಿಜಯದ ರೂವಾರಿಗಳಾದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆಪಿ ನಡ್ಡಾ ಅವರಿಗೆ, ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರಿಗೆ ಅವರಿಗೆ, ಉಪಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಅವರಿಗೆ ಮತ್ತು ಬಿಜೆಪಿ ಮಹಾರಾಷ್ಟ್ರದ ಎಲ್ಲ ಕಾರ್ಯಕರ್ತರಿಗೆ ಹೃತ್ಪೂರ್ವಕ ಅಭಿನಂದನೆಗಳು’ ಎಂದು ಹೇಳಿದ್ದರು.
ಮುಂಬೈ ಮಹಾನಗರದ ಜನತೆ ಬಿಜೆಪಿಗೆ ಬೆಂಬಲಿಸಿದಂತೆ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿಯೂ ಸಹ ಬೆಂಗಳೂರಿನ ಮಹಾ ಜನತೆ ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ಆಶೀರ್ವಾದ ಮಾಡಲಿದ್ದು, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪತನದ ಹಾದಿ ಆರಂಭವಾಗುವುದು ನಿಶ್ಚಿತ’ ಎಂದು ಭರವಸೆ ವ್ಯಕ್ತಪಡಿಸಿದ್ದರು.
198 ವಾರ್ಡ್‌ಗಳ ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಎಂದು ಬದಲಾವಣೆ ಮಾಡಿದ ಬಳಿಕ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ. ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್, ಬೆಂಗಳೂರು ನಗರ ಉಸ್ತುವಾರಿ ಸಚಿವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್.
ಆದ್ದರಿಂದ ಜಿಬಿಎ ಚುನಾವಣೆ ಕುತೂಹಲ ಮೂಡಿಸಿದೆ. ಬಿಜೆಪಿ-ಜೆಡಿಎಸ್ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿವೆ. ಜಿಬಿಎ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಎದುರಿಸಲಿವೆಯೇ? ಎಂದು ಕಾದು ನೋಡಬೇಕಿದೆ.
ಜಿಬಿಎ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಗ್ಯಾರಂಟಿ ಯೀಜನೆಗಳ ಮೂಲಕ ಅತ್ಯುತ್ಸಾಹದಲ್ಲಿರುವ ಕಾಂಗ್ರೆಸ್ ಚುನಾವಣೆಯನ್ನು ಗೆದ್ದು ಜನರಿಗೆ ಸರ್ಕಾರದ ಮೇಲೆ ವಿಶ್ವಾಸವಿದೆ ಎಂಬುದನ್ನು ಸಾಬೀತು ಮಾಡಲು ಕಾಯುತ್ತಿದೆ.

