ಕೊಪ್ಪಳ: ಹೆತ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ತಂದೆಗೆ ಕೊಪ್ಪಳದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 80 ಸಾವಿರ ರೂ. ದಂಡ ವಿಧಿಸಿದೆ.
ಕೊಪ್ಪಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ವ್ಯಕ್ತಿ ತನ್ನ 16 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. 2020ರಲ್ಲಿ ನಡೆದ ಘಟನೆ ಬಗ್ಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕುಮಾರ ಡಿ.ಕೆ. ಅವರು ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ನೀಡಿದ್ದಾರೆ.
ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು.
ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಕೊಪ್ಪಳ ಗ್ರಾಮೀಣ ಠಾಣೆಯ ಸಿಪಿಐ ಸುರೇಶ್ ಡಿ. ಮತ್ತು ರವಿ ಉಕ್ಕುಂದ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತ ಬಾಲಕಿಗೆ ಜನಿಸಿದ ಮಗುವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೂಲಕ ದತ್ತು ಪ್ರಕ್ರಿಯೆಗೆ ಒಳಪಡಿಸಲಾಗಿತ್ತು.