HomeKarnatakaGOOD NEWS: ಶಿಕ್ಷಕರು ಸೇರಿ ಶಾಲಾ –ಕಾಲೇಜುಗಳಲ್ಲಿ 15 ಸಾವಿರ ಬೋಧಕ ಹುದ್ದೆಗಳ ಭರ್ತಿ

GOOD NEWS: ಶಿಕ್ಷಕರು ಸೇರಿ ಶಾಲಾ –ಕಾಲೇಜುಗಳಲ್ಲಿ 15 ಸಾವಿರ ಬೋಧಕ ಹುದ್ದೆಗಳ ಭರ್ತಿ

ಬೆಂಗಳೂರು: 2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿಎಂ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಲಾಗಿದೆ.

ಖಾಸಗಿ ಶಾಲೆಗಳ ಮಾನ್ಯತೆ ಪಡೆಯುವ ಹಾಗೂ ನವೀಕರಿಸುವ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕ ಅರ್ಜಿ ಹಾಗೂ ದಾಖಲೆಗಳನ್ನು ಸಲ್ಲಿಸಲು ಅನುಮತಿಸಿ ಸರಳೀಕರಣಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2025–26ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಸವಲತ್ತುಗಳನ್ನು ಮೊದಲ ಬಾರಿಗೆ ನೇರ ನಗದು ವರ್ಗಾವಣೆ (DBT) ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಗ್ರಾಮೀಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರಗಳನ್ನು ಆನ್-ಲೈನ್ ಮೂಲಕ ವಿತರಿಸಲಾಗಿದೆ.

ʻಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ADB ನೆರವಿನೊಂದಿಗೆ 500 ಶಾಲೆಗಳು, KKRDB ನಿಧಿಯಿಂದ 200 ಶಾಲೆಗಳು ಹಾಗೂ KMERC ನಿಧಿಯಿಂದ 100 ಶಾಲೆಗಳು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದಕ್ಕಾಗಿ ಒಟ್ಟಾರೆ 3,900 ಕೋಟಿ ರೂ.ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ವೆಚ್ಚ ಮಾಡಲಾಗುವುದು.

ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ (KPS) ಶಿಕ್ಷಕರ ಹುದ್ದೆಗಳನ್ನು ಮಹತ್ವದ ಹುದ್ದೆಗಳೆಂದು ಪರಿಗಣಿಸಿ ಮೊದಲ ಆದ್ಯತೆಯಲ್ಲಿ ಭರ್ತಿ ಮಾಡಲಾಗುವುದು ಹಾಗೂ ಸದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶಿಕ್ಷಕರ ನೇಮಕಾತಿ ಮಾಡಲು ಆದ್ಯತೆ ನೀಡಲಾಗುವುದು.

ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ವಿಶೇಷವಾಗಿ ದಾಖಲಾತಿ ಪ್ರಮಾಣ ಮತ್ತು ಕಲಿಕೆಯ ಫಲಿತಾಂಶಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ 1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ. 2026-27ನೇ ಸಾಲಿನಿಂದ ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕಗಳನ್ನು, 1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು.

ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ.ಗಳು, ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ.ಗಳು ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಸದರಿ ಅನುದಾನವನ್ನು ಶಾಲಾ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ನೇರವಾಗಿ ವರ್ಗಾಯಿಸಲಾಗುವುದು.

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಜಾರಿಗೊಳಿಸಲು ಪ್ರಾಥಮಿಕ ಶಾಲಾ ಶಿಕ್ಷಕರ ಸಾಮರ್ಥ್ಯ ವೃದ್ಧಿಗಾಗಿ ಇಂಗ್ಲಿಷ್ ಭಾಷಾ ತರಬೇತಿ ಕಾರ್ಯಕ್ರಮವನ್ನು 24 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.

IIT ಧಾರವಾಡದ ಸಹಯೋಗದೊಂದಿಗೆ 8 ರಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 12.28 ಲಕ್ಷ ವಿದ್ಯಾರ್ಥಿಗಳಿಗೆ ಅಂದಾಜು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಪ್ರಕ್ರಿಯೆಯಲ್ಲಿ AI ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್ ಸೌಲಭ್ಯವನ್ನು ಒದಗಿಸಲಾಗುವುದು.

2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 BRC ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲಾಗುವುದು.

ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು.

ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular