ಬೆಂಗಳೂರು : ರಾಜ್ಯದ ಎಲ್ಲಾ ನಿವೇಶನ ಹಾಗೂ ವಸತಿ ರಹಿತರಿಗೆ ನಿವೇಶನ ಒದಗಿಸುವ ಚುನಾವಣಾ ಪ್ರಣಾಳಿಕೆಯ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಉದ್ದೇಶಿಸಲಾಗಿದ್ದು, ನಿವೇಶನಗಳ ರಚನೆಗೆ ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಮೂಲಕ ಸೂಚನೆ ನೀಡಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ 30×40, ನಗರದಲ್ಲಿ 20×30 ಅಡಿ ನಿವೇಶನ
ಸರ್ಕಾರದ ಯೋಜನೆಯಂತೆ ಗ್ರಾಮೀಣ ಪ್ರದೇಶಗಳಲ್ಲಿ 30×40 ಅಡಿ ಅಳತೆಯ ಹಾಗೂ ನಗರ ಪ್ರದೇಶಗಳಲ್ಲಿ 20×30 ಅಡಿ ಅಳತೆಯ ನಿವೇಶನಗಳನ್ನು ಸಿದ್ಧಪಡಿಸಲು ಉದ್ದೇಶಿಸಲಾಗಿದೆ.
ಇದಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ಲಭ್ಯವಿರುವ ಹಾಗೂ ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ತಕ್ಷಣ ಗುರುತಿಸುವಂತೆ ಸೂಚಿಸಲಾಗಿದೆ.
ಯಾವುದೇ ವಿಳಂಬಕ್ಕೆ ಅವಕಾಶ ನೀಡದಂತೆ ಸೂಚನೆ
ನಿವೇಶನಗಳ ರಚನೆಗೆ ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳನ್ನು ಯಾವುದೇ ವಿಳಂಬಕ್ಕೆ ಆಸ್ಪದ ನೀಡದೆ ತುರ್ತಾಗಿ ಪೂರ್ಣಗೊಳಿಸುವಂತೆ ಡಾ. ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದ ನಿವೇಶನ ಹಾಗೂ ವಸತಿ ರಹಿತರಿಗೆ ನಿವೇಶನ ಕಲ್ಪಿಸುವ ಸರ್ಕಾರದ ಭರವಸೆಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಈ ಕ್ರಮ ಮಹತ್ವದ್ದಾಗಿದೆ.

